ರಾಮನಗರ: ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ. ಹಲವು ಯೋಜನೆಗಳು ಪ್ರಗತಿಯ ಹಂತದಲ್ಲಿದ್ದು, ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ನಂತರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲೆಯ ರೈತರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು, ದೇಶದ ಬೆನ್ನೆಲ್ಲುಬಾಗಿರುವ ರೈತ ಬಾಂಧವರ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಎಲ್ಲರೂ ಲಸಿಕೆ ಪಡೆದುಕೊಳ್ಳಲು ಮರೆಯದಿರಿ ಎಂದರು.
ಕೋವಿಡ್-19 ಮೂರನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಸೋಂಕು ತಡೆಯುವಲ್ಲಿ ಲಸಿಕೆ, ಸಾಮಾಜಿಕ ಅಂತರ, ಸಮರ್ಪಕ ಸಿದ್ಧತಾ ಕ್ರಮಗಳು ಅತ್ಯಮೂಲ್ಯ ಎಂದು ಹೇಳಿದರು.
ಬಳಿಕ ಚನ್ನಪಟ್ಟಣ ತಾಲೂಕಿನ ಹೊಸಹಳ್ಳಿಯ ರೈತರ ಉತ್ಪಾದಕರ ಸಂಸ್ಥೆ ಸ್ಥಳಕ್ಕೆ ಭೇಟಿ ನೀಡಿದರು. ರೈತರಿಂದ ಖರೀದಿಸಿದ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ ಅವುಗಳನ್ನು ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಹೆಚ್ಚು ಯಶಸ್ವಿಯಾಗಿದ್ದು, ಲಾಭದಾಯಕ ಕೂಡಾ ಆಗಿದೆ. ಈ ಮೊದಲಿಗಿಂತಲೂ ರೈತರಿಗೆ ಹೆಚ್ಚಿನ ದರ ಸಿಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಗೆ ಉಚಿತವಾಗಿ ಜಮೀನು ನೀಡಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
![](https://vijayapatha.in/wp-content/uploads/2024/02/QR-Code-VP-1-1-300x62.png)