NEWSಕೃಷಿನಮ್ಮಜಿಲ್ಲೆ

ಕೃಷಿ ಚಟುವಟಿಕೆ ನಡೆಸಲು ನಿರ್ಬಂಧ ಇಲ್ಲ

ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕೃಷಿ ಚಟುವಟಿಕೆ ನಡೆಸಲು ಸರ್ಕಾರ ರೈತರಿಗೆ ಯಾವುದೇ ನಿರ್ಬಂಧ ವಿಧಿಸಿರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದು ಕೃಷಿ ಸಚಿವ  ಬಿ.ಸಿ.ಪಾಟೀಲ್ ಹೇಳಿದರು.

ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ  ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಕೊರೊನಾ ವೈರಾಣು ಸೋಂಕು ನಿವಾರಣೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷಿ ಉತ್ಪ್ಸನ್ನಗಳ ಸರಕು ಸಾಗಾಣಿಕೆ, ಬೀಜ ಹಾಗೂ ಗೊಬ್ಬರಗಳ ಸರಬರಾಜು ಸೇರಿದಂತೆ ಮತ್ತಿತರರ ಕೃಷಿ ಚಟುವಟಿಕೆಗಳ ಬಗ್ಗೆ ಅಗತ್ಯ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಪರಿಕರಗಳು ಸೇರಿದಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಇಟ್ಟುಕೊಳ್ಳುವುದರೊಂದಿಗೆ ಜಿಲ್ಲೆಯ ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗಬಾರದು. ಅಲ್ಲದೇ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳನ್ನು ತೆರೆದು, ರಸಗೊಬ್ಬರ, ಔಷಧಿ, ಸೇರಿದಂತೆ ಮತ್ತಿತರ ಕೃಷಿ ಪರಿಕರಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರೀನ್ ಪಾಸ್ ನೀಡುವ ವೇಳೆ ಸಂಚರಿಸುವ ಸ್ಥಳಗಳ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕು. ರೈತರು ಗ್ರೀನ್ ಪಾಸ್‍ಗಳು ದುರುಪಯೋಗವಾಗದಂತೆ ಎಚ್ಚರವಹಿಸಬೇಕು. ಅಲ್ಲದೇ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿಕೊಳ್ಳುವ ಮೂಲಕ ಕೊರೋನಾ ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ರೈತ ಮುಖಂಡರು ಲಾಕ್ ಡೌನ್ ಹಿನ್ನೆಲೆ ಬೇಡಿಕೆಯಿಲ್ಲದ ಕಾರಣ ಹೂ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಇವರ ಸಹಾಯಕ್ಕೆ ಮುಂದಾಗಬೇಕಿದೆ. ಅಲ್ಲದೇ ದ್ರಾಕ್ಷಿ ಬೆಳೆಗಾರರು ಸಹ ಇದೇ ರೀತಿ ಸಮಸ್ಯೆಯನ್ನು ಎದುರಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ  ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಪ್ರಸ್ತುತ ಬೆಳಿಗ್ಗೆ 3 ಹಾಗೂ ರಾತ್ರಿ 4 ತಾಸು ವಿದ್ಯುತ್ ಪೂರೈಕೆ ಆಗುತ್ತಿದ್ದು, ವಿದ್ಯುತ್ ಪೂರೈಕೆಯ ಅವಧಿಯನ್ನು ವಿಸ್ತರಿಸುವ ಮೂಲಕ ಮೂಲಕ ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಕೃಷಿ ಸಚಿವರು ವಿಷಯದ ಗಂಭೀರತೆ ಅರ್ಥವಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲೇ ಚರ್ಚಿಸಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲೆಯ ಶಾಸಕರುಗಳಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಡಾ. ಶ್ರೀನಿವಾಸಮೂರ್ತಿ, ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಆ.ದೇವೇಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಉಪ ಕಾರ್ಯದರ್ಶಿ ಕರಿಯಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!