NEWSನಮ್ಮಜಿಲ್ಲೆರಾಜಕೀಯ

ತಮಿಳುನಾಡು ಹಠಹಿಡಿದು ಮೇಕೆದಾಟು ಯೋಜನೆ ವಿರೋಧಿಸಿದರೆ ರಾಜಕೀಯ ಸಂಘರ್ಷ : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಅನುಭವಿಸಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಠಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ವಿರೋಧ ಸಲ್ಲದು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು.

ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಡುವುದನ್ನು ಕೇಂದ್ರ @BJP4India ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ರೀತಿಯಲ್ಲಿ ಇಲ್ಲಿಯೂ ರಾಜಕೀಯ ಮಾಡಬಾರದು.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯವನ್ನಾಗಲಿ, ರಾಜಿಯನ್ನಾಗಲಿ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ವಿಚಾರದಲ್ಲಿ
@CMofKarnataka ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.

‘ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ಕುವೆಂಪು ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ @BJP4Karnataka ಭಿನ್ನಾಭಿಪ್ರಾಯ ಇದ್ದರೆ ಅದನ್ನು ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ.

ಮೇಕೆದಾಟು ಬಗ್ಗೆ @CMofKarnataka ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ
@CTRavi_BJP ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ @BSBommai ಸ್ಪಷ್ಟಪಡಿಸಬೇಕು. ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ @CTRavi_BJP ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು