ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ 9.23 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2020 ರ ಮಾಹೆಯಲ್ಲಿ ಒಟ್ಟು 17,134 ಟ್ರಿಪ್ ಗಳನ್ನು ತಪಾಸಿಸಿ, 5127 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು 8,96,150 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 2373 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 274 ಪುರುಷ ಪ್ರಯಾಣಿಕರಿಂದ ಒಟ್ಟು 27,400 ರೂ. ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.
ಒಟ್ಟಾರೆ ಫೆಬ್ರವರಿಯಲ್ಲಿ 5401 ಪ್ರಯಾಣಿಕರಿಂದ ಒಟ್ಟು 9,23,550 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಪ್ರಯಾಣಿಕರು ಬೆಂಗಳುರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ . ಜತೆಗೆ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಅಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ. .