ಬೆಂಗಳೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿನ ನಂಟು ಕಳೆದುಕೊಂಡರು.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಶೆಟ್ಟರ್ ಅವರು, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ನಾನು ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ ಎಂದರು.
ಇನ್ನು ಈ ಚುನಾವಣೆಗೆ ನಿಮಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ನಾನು ಜನಸಂಘ, ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ 6 ತಿಂಗಳಿನಿಂದ ಕಡೆಗಣಿಸಿದ್ದರು, ನನಗೆ ಗೌರವ ಕೊಡಲಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲೂ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ: ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಹೂಗುಚ್ಛ ಹಾಗೂ ಪಕ್ಷದ ಬಾವುಟ ನೀಡಿ ಸ್ವಾಗತಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಜಗದೀಶ್ ಶೆಟ್ಟರ್ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವುದರಿಂದ ಉತ್ತರ ಕರ್ನಾಟಕದಲ್ಲೂ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಶೆಟ್ಟರ್ ಅವರಷ್ಟೇ ಗೆಲ್ಲದೇ ಉತ್ತರ ಕರ್ನಾಟಕದಲ್ಲಿ ಬೇರೆ ಕ್ಷೇತ್ರಗಳಲ್ಲಿ ಗೆಲ್ಲಲು ಸಹಾಯ ಮಾಡುತ್ತಾರೆಂಬ ನಂಬಿಕೆಯಿದೆ. ಇನ್ನು ನಮ್ಮ ಪಕ್ಷದ ನೀತಿ ಏನಿದೆ ಅದೆಲ್ಲವೂ ಶೆಟ್ಟರ್‌ಗೆ ಗೊತ್ತಿದೆ ಎಂದರು.
ಈವರೆಗೆ ಯಾವ ಐಡಿಯಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು ಅನ್ನೋದು ನಿಮಗೆ ಗೊತ್ತಿದೆ. ಅನೇಕ ವರ್ಷಗಳ ಕಾಲ ಆ ಪಕ್ಷ ಕಟ್ಟಿ ಕೆಲಸ ಮಾಡಿ ಬೆಳೆಸಿದರು. ಅದೇ ರೀತಿ ಇಲ್ಲೂ ಕೆಲಸ ಮಾಡ್ತಾರೆ ಅನ್ನೊ ನಂಬಿಕೆಯಿದೆ ಎಂದು ಹೇಳಿದರು.