NEWSನಮ್ಮಜಿಲ್ಲೆ

ವಿಕೇಂದ್ರೀಕೃತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ

ಬೆಳಗಾವಿಯಲ್ಲಿ ಸಭೆ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜನರು ಒಂದೇ ಕಡೆ ಸೇರದಂತೆ ಮಾರುಕಟ್ಟೆ ವ್ಯವಸ್ಥೆಯನ್ನು  ವಿಕೇಂದ್ರೀಕರಣಗೊಳಿಸುವ ಮೂಲಕ ಎಲ್ಲೆಡೆ ಅಗತ್ಯ ವಸ್ತುಗಳು ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು.

ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಲಹೆ ನೀಡಿದರು.

ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಎಲ್ಲ ಜನಪ್ರತಿನಿಧಿಗಳಿಗೆ ಕಳುಹಿಸಿ, ಅವರ ಮೂಲಕ ಆಯಾ ಕ್ಷೇತ್ರದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜತೆ‌ ಮಾತನಾಡಲಾಗಿದ್ದು, ಆದಷ್ಟು ಬೇಗನೇ ಆರಂಭಿಸುವುದಾಗಿ ತಿಳಿಸಿದ್ದಾರೆ.

21 ದಿನಗಳ ಲಾಕ್ ಡೌನ್ ಅನ್ನು ನಾವೆಲ್ಲರೂ ಕಡ್ಡಾಯವಾಗಿ ಪಾಲಿಸಿದಾಗ ಮಾತ್ರ ಕರೊನಾ ತಡೆಗಟ್ಟುವುದು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಕರೆ ನೀಡಿದರು.

ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಜಿಲ್ಲೆಯಲ್ಲಿ ತುರ್ತಾಗಿ ಪ್ರಯೋಗಾಲಯ ಆರಂಭಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ‌ ಜೊಲ್ಲೆ  ಮಾತನಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುನ್ನೆಚ್ಚರಿಕೆ ಮೇರೆಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಅಂಗನವಾಡಿ ಮಕ್ಕಳಿಗೆ ಮನೆ ಮನೆಗೆ ಆಹಾರ ಸಾಮಗ್ರಿಗಳನ್ನು ಕಳಿಸಲಾಗುತ್ತಿದೆ ಎಂದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ಸರಕು ಸಾಮಗ್ರಿಗಳು ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮಾತನಾಡಿ, ನೆರೆಯ ರಾಜ್ಯ ಮತ್ತು ಬೆಂಗಳೂರಿನಿಂದ ನೂರಾರು ಸಂಖ್ಯೆಯ ಯುವಕರು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬರುವ ಜನರ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.

ತಾಲೂಕು ಆಸ್ಪತ್ರೆಗೆ ವೆಂಟಿಲೇಟರ್ ಒದಗಿಸಿ

ಶಾಸಕ ಸತೀಶ್ ಜಾರಕಿಹೊಳಿ ಮಾತನಾಡಿ, ಕಾರ್ಖಾನೆಗಳಲ್ಲಿ ನೂರಾರು ಕಾರ್ಮಿಕರು ಒಂದೇ ಕಡೆ ಕೆಲಸ ಮಾಡುತ್ತಿರುವುದರಿಂದ ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಆಗಾಗ ಭೇಟಿ ನೀಡಿ ಸೂಕ್ತ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.

ಸರ್ಕಾರದಿಂದ ತುರ್ತು ಅನುದಾನ ಬಂದರೆ ತಾಲ್ಲೂಕು ಆಸ್ಪತ್ರೆಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಗೋವಾ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಜನರನ್ನು ಸಾಧ್ಯವಾದರೆ ಒಂದು ಕಡೆ ಕ್ವಾರಂಟೈನ್ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿಕೊಂಡರು.

ಹತ್ತು ಜನರ ಮಾದರಿ ಕಳಿಸಲಾಗಿದ್ದು, ಎಲ್ಲ ಮಾದರಿಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಸರ್ಕಾರದ ನಿರ್ದೇಶನದ ಮೇರೆಗೆ ಅಂತಾರಾಜ್ಯ ಹಾಗೂ ಅಂತರ್ ಜಿಲ್ಲಾ ಗಡಿಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಪ್ರತ್ಯೇಕ ಕೋವಿಡ್ ಆಸ್ಪತ್ರೆ ಸ್ಥಾಪನೆಯ ಸಾಧ್ಯತೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಅಗತ್ಯ ವಸ್ತುಗಳ ಕೊರತೆಯಾಗದಂತೆ ಎಲ್ಲ ರೀತಿಯ ಸರಕು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅವಶ್ಯಕತೆ ಇರುವವ ಜನರಿಗೆ ಪಾಸ್ ಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

1825 ಕ್ವಾರಂಟೈನ್ ವಾರ್ಡ್‌ ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.

ತುರ್ತು ಸಂದರ್ಭದಲ್ಲಿ ಅನುಕೂಲವಾಗುವಂತೆ ಮೊರಾರ್ಜಿ ವಸತಿ ಶಾಲೆಗಳಲ್ಲೂ 200 ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್ ನಿಯಂತ್ರಣ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲು ಐಇಸಿ ಚಟುವಟಿಕೆಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

Leave a Reply