ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ
ನ್ಯೂಡೆಲ್ಲಿ: ಇದೇ ಮಾ.11ರಿಂದ ಆರಂಭವಾಗಿ ಇಂದಿಗೆ ಅಂದರೆ ಮಂಗಳವಾರಕ್ಕೆ ಎರಡು ವಿಷಯಗಳ ( ಸೋಮವಾರ ಕನ್ನಡ ಮತ್ತು ಮಂಗಳವಾರ ಇಂಗ್ಲಿಷ್) ಪರೀಕ್ಷೆಗಳು ಆದ ಬಳಿಕ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಮಾಡುತ್ತಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 12) ತಡೆ ನೀಡಿದೆ.
ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ 5,8,9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕ ಪೀಠದ ತೀರ್ಪನ್ನು ರದ್ದುಗೊಳಿಸಿತ್ತು. ಆದರೆ, ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ತಡೆ ನೀಡಿದೆ.
ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಮತ್ತು ಪೋಷಕರ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್ ಇಂದು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.
ಹೈಕೋರ್ಟ್ ವಿಭಾಗೀಯ ಪೀಠ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕ ಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿತ್ತು. ಇದೀಗ ವಿಭಾಗೀಯ ಪೀಠದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಹಗ್ಗಜಗ್ಗಾಟದಿಂದ ಕಂಗಾಲಾಗಿದ್ದಾರೆ
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಗತ್ಯವಿಲ್ಲ ಮತ್ತು 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಈ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ.
ಪರೀಕ್ಷೆ ಮುಂದೂಡಿಕೆ : ಸುಪ್ರೀಂ ಕೋರ್ಟ್ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ, ಮಾರ್ಚ್ 11ರಿಂದ 18ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಇಂದು ಮುಂದೂಡಿದ್ದು ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರುಮಾಹಿತಿ ನೀಡಿದ್ದಾರೆ.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ 6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು (Quash) ಮಾಡಲಾಗಿದೆ.
ಈ ತೀರ್ಪಿನ ವಿರುದ್ಧ ಸರ್ಕಾರವು 7-3-2024 ರಂದು ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಅಲಿಸಿ ಸದರಿ 5. 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರಿಸಲು ಮಧ್ಯಂತರ ತೀರ್ಪು ನೀಡಲಾಗಿತ್ತು. ಅದರಂತೆ 11-03-2024ರಿಂದ 5,8 ಮತ್ತು 9ನೇ ತರಗತಿಗಳ ಪರೀಕ್ಷೆ ನಡೆಸಲಾಗುತ್ತಿತ್ತು.
ತದನಂತರ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ. ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024. ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಈ ದಾವೆಗಳನ್ನು ವಿಚಾರಣೆ ನಡೆಸಿದ್ದು ಈ ದಿನದ ಆದೇಶದಲ್ಲಿ ಈ ಮಧ್ಯಂತರ ತೀರ್ಪನ್ನು ರದ್ದುಪಡಿಸಿದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿದೆ. ಈ ಹಿನ್ನೆಲೆಯಲ್ಲಿ 13-3-2024ರಿಂದ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗಳಿಗೆ ಸೂಚನೆ ನೀಡಿದ್ದಾರೆ.