ನ್ಯೂಡೆಲ್ಲಿ: ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ತಿಳಿಸಿದ್ದಾರೆ.
ಏ.14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಲಾಕ್‍ಡೌನ್ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ನನಗೆ ಶಾಕ್ ಆಯ್ತು. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಲಾಕ್‍ಡೌನ್ ವಿಸ್ತರಿಸಲಿದೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಈ ನಡುವೆ ವಾಟ್ಸಪ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಹಾಗಾಗಿ ಸೋಮವಾರ ರಾಜೀವ್ ಗೌಬಾ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಆಗುತ್ತಿದೆ. ಆದರೂ ಜನರು ಮಾತ್ರ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಆತಂಕವನ್ನು ಉಂಟು ಮಾಡಿದೆ.