ಬಾಗಲಕೋಟೆ: ಜಿಲ್ಲೆಯಾದ್ಯಂತ ಕೋವಿಡ್19 ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯದೇ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವುದನ್ನು ಸಿಆರ್‍ಪಿಸಿ ಕಲಂ 144 ರಡಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ತಡೆಗಟ್ಟಲು ವ್ಯವಸ್ಥಿತ ನಿರ್ವಹಣೆಗಾಗಿ ಐಸೋಲೇಶನ್ ಕೇಂದ್ರಗಳಲ್ಲಿ ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುವವರನ್ನು ಭಾರತ ಸರಕಾರವು ಹೊರಡಿಸಿದ ಕೋವಿಡ್-19 ಮೃತದೇಹಗಳ ನಿರ್ವಹಣಾ ಮಾರ್ಗಸೂಚಿಗಳನ್ವಯ ಜಿಲ್ಲಾ ಆಡಳಿತದ ಉಸ್ತುವಾರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದರು.
ಸ್ವಾಭಾವಿಕವಾಗಿ ಮೃತರಾದರೂ ಸಹಿತ ಅಂತ್ಯ ಸಂಸ್ಕಾರ ನೆರವೇರಿಸುವ ಮುನ್ನ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(2)ರಡಿ ಶಿಕ್ಷೆಗೆ ಒಳಪಡಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ.