ಹನೂರು: ತಾಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 11ರಂದು ರಾಮಾಪುರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಸವರಾಜ ದೊಡ್ಡಟ್ಟಿ ಅವರು ಆಯ್ಕೆಯಾಗಿದ್ದಾರೆ.
ಸರ್ವಾಧ್ಯಕ್ಷರನ್ನು ಕನ್ನಡ ಸಾಹಿತ್ಯದ ಪರಿಷತ್ತಿನ ಪರವಾಗಿ ಅಭಿನಂದಿಸಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿ ಕೊಡುವಂತೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಶೈಲಸ್ ಕುಮಾರ್ ಮತ್ತು ಹನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲೇಶ ಮಾಲಿಂಕಟ್ಟೆ ಇದ್ದರು.
ಫೆಬ್ರವರಿ 11ರಂದು ಸಮ್ಮೇಳನದ ಸಾನಿಧ್ಯವನ್ನು ಸಾಲೂರು ಮಠದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಿಕೊಳ್ಳುವರು. ಸಮ್ಮೇಳನವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ನಾಗಣ್ಣ ಡಿ. ಉದ್ಘಾಟನೆಯನ್ನು ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರದ ಶಾಸಕ ನರೇಂದ್ರ ವಹಿಸಲಿದ್ದಾರೆ.
ವಿಚಾರಗೋಷ್ಠಿ, ಕವಿಗೋಷ್ಠಿ ಸೇರಿದಂತೆ ವಿವಿಧ ಸಾಹಿತ್ಯ ಕಾರ್ಯಕ್ರಮಗಳು ನಡೆಯಲಿದ್ದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳ ನಾಗಪ್ಪ ವಹಿಸಿಕೊಳ್ಳುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಮುನಿ ಸಮಾರೋಪ ಭಾಷಣ ಮಾಡುವರು. ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರುತ್ತದೆ ಎಂದು ಹನೂರು ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲೇಶ್ ಮಾಲಿಂಕಟ್ಟೆ ತಿಳಿಸಿದ್ದಾರೆ.