ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ
ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ನೀಡುತ್ತಿರೀ ಎಂದು ಸಚಿವರು ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನ ಹಂಚಿಕೆ ಸಂಬಂಧ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಶಿರವಾರ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ ಒತ್ತು ನೀಡಲು ಬದ್ಧನಿದ್ದೇನೆ ಎಂದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನ ಹಂಚಿಕೆ ಸಂಬಂಧ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ನಲ್ಲಿ ನಿವೇಶನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ನಮ್ಮ ಸರ್ಕಾರವು ಹಸಿವಿನಿಂದ ಯಾರೊಬ್ಬರು ಮಲಗಬಾರದು ಎಂದು ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ವಿತರಿಸಿ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿಗಳ ಮೂಲಕ ಸರ್ಕಾರ ಮಹತ್ತರ ಬದಲಾವಣೆಗೆ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.
2028ಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ನೀಡುತ್ತಿರೀ ಎಂದು ಸಚಿವರು ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿರವಾರ ಗ್ರಾಮದಲ್ಲಿನ ಇನ್ನುಳಿದ ರಸ್ತೆ, ಚರಂಡಿ, ನಿವೇಶನ ಹಕ್ಕು ಪತ್ರ ಸಮಸ್ಯೆ, ಕನಕ ಭವನ ನಿರ್ಮಾಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ಶಿರವಾರ ಗ್ರಾಮಸ್ಥರಿಗೆ ಅದೇ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಿಸಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಜತೆಗೆ ಅವರ ಕೆಲಸ ಕಾರ್ಯಗಳು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ತಮ್ಮ ಜಿಲ್ಲಾ ಪ್ರವಾಸದ ವೇಳೆ ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಆಗ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಹಸೀಲ್ದಾರ್‌ಗೆ ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಜಿಲ್ಲೆಯ ತೂಬಗೇರೆ ಹೋಬಳಿ ವ್ಯಾಪ್ತಿಯಲ್ಲಿ ಸಚಿವರು 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಅಷ್ಟೇ ಅಲ್ಲದೇ ಈ ಭಾಗಕ್ಕೆ ವೃಷಭಾವತಿ ನೀರು ತರಲಾಗುತ್ತಿದ್ದು, ಇದರಿಂದ ಜಮೀನಿನಲ್ಲಿ ಬೋರ್ವೆಲ್‌ಗಳ ಅಂತರ್ಜಲ ಮಟ್ಟವನ್ನು ವೃದ್ದಿಯಾಗಲು ಶ್ರಮಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬಯಪ ಸದಸ್ಯ ಪ್ರಸನ್ನ ಕುಮಾರ್, ಕೆಪಿಸಿಸಿ ಸದಸ್ಯ ಮುನಿರಾಜು, ತೂಬಗೇರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ಧಪ್ಪ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯರು, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಹಣಬೆ ಗ್ರಾಪಂ ಪಿಡಿಒ ಸೌಮ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
Related









