ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂ. ದರ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯ ಜಿಲಾಧಿಕಾರಿಗಳ ಕಚೇರಿಗೆ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಿದ್ದಾರೆ.
ಡಿಸಿ ಕಚೇರಿಗೆ ಬೀಗ ಹಾಕಿ ಮುಂಭಾಗದಲ್ಲಿ ಧರಣಿ ಕುಳಿತ್ತಿದ್ದಾರೆ ಕಬ್ಬು ಬೆಳೆಗಾರ ರೈತರು. ಅಲ್ಲೆ ಹಾಸಿಗೆ ಹಾಸಿ ವಿನೂತನ ಪ್ರತಿಭಟನೆಯನ್ನು ಮಾಡಿದ್ದಾರೆ.
ಟನ್ ಕಬ್ಬಿಗೆ 5,500 ರೂ. ದರ ನಿಗದಿ ಸೇರಿದಂತೆ ಇತರ ಬೇಡಿಕೆ ಈಡೇರಿಸಬೇಕು ಎಂದು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಡಿಸಿ ನಿತೇಶ್ ಪಾಟೀಲ್ ನಡೆಸಿದ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ.
ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳಕ್ಕೆ ಸಕ್ಕರೆ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಸಚಿವ ಬಾರದೆ ಹೋದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.