ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಪ್ರೇಮ್ ಸಿಂಗ್ ನಾಯ್ಕ್‌ಗೆ ಮೂರು ವರ್ಷ ಸಾದಾ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ 2024 ಡಿಸೆಂಬರ್ 13 ರಂದು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಿವರ: ಈ ಪ್ರಕರಣ ಜೂನ್ 3, 2019 ರಂದು ನಡೆದ ಘಟನೆಗೆ ಸಂಬಂಧಿಸಿದೆ. ಅಂದಿನ ಪಿಡಿಒ ಪ್ರೇಮ್ ಸಿಂಗ್ ನಾಯ್ಕ್ 9/11 ನೋಂದಣಿಗೆ ಸಂಬಂಧಿಸಿದಂತೆ 9 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಈ ಕುರಿತು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018) ಕಲಂ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಬಳಿಕ ಕಾರ್ಯಾಚರಣೆಗೆ ಇಳಿದ ಭ್ರಷ್ಟಾಚಾರ ನಿಗ್ರಹ ದಳ ತಂಡ ಲಂಚದ ಹಣ ಸಹಿತ ಆರೋಪಿಯನ್ನು ಬಂಧಿಸಿತು. ವಿಚಾರಣೆಯ ನಂತರ (ವಿಶೇಷ ಪ್ರಕರಣ ಸಂಖ್ಯೆ 170/2020) ನ್ಯಾಯಾಲಯವು ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ, ಆರೋಪಿ ಹೆಚ್ಚುವರಿಯಾಗಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
ಇನ್ಸ್ ಪೆಕ್ಟರ್ ಎಚ್.ಎಂ. ಶ್ಯಾಮ್ ಸುಂದರ್ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಆರೋಪಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ, ಕರ್ನಾಟಕ ಲೋಕಾಯುಕ್ತ, ಮಂಗಳೂರು ರವೀಂದ್ರ ಮುನ್ನಿಪಾಡಿ ವಾದ ಮಂಡಿಸಿದ್ದರು.
ರಾಜ್ಯ ಸೇರಿದಂತೆ ಮಂಗಳೂರು ಜಿಲ್ಲೆಗೂ ಭ್ರಷ್ಟಾಚಾರ ತಡೆಗೆ ಈ ತೀರ್ಪು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.