ಬೆಂಗಳೂರು: ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದು ಹೇಳಿದರು.