ಬೆಂಗಳೂರು: ದೇಶದ ತ್ರೈಮಾಸಿಕ ಜಿಡಿಪಿ ಮಹಾಕುಸಿತಕ್ಕೆ, ಕೇಂದ್ರ ಅಡ್ಡಕಸುಬಿ ಆರ್ಥಿಕ ನಿರ್ವಹಣೆ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಜಿಡಿಪಿ ಶೇ. 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ, ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ಮೇಲೆ ಹೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಜವಾಬ್ದಾರಿಯಿಂದ ನುಣುಚಿ ಕೊಳ್ಳಲು ಮುಂದಾಗಿರುವುದು ಇದು ಅದಕ್ಕಿಂತ ಹೆಚ್ಚಿನ ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ, ಆರ್ ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರು ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಈಗ ಕುರುಡು-ಕಿವುಡು ಆಗಿದ್ದ ಸರ್ಕಾರ ಕೊರೊನಾಕ್ಕಾಗಿ ರೋದಿಸುತ್ತಿದೆ ಎಂದು ತಿಳಿಸಿದ್ದಾರೆ.
2015ರಲ್ಲಿ ಜಿಡಿಪಿ ಅಂದಾಜು ಮಾಡಿದ ಮೂಲ ವರ್ಷವನ್ನು 2004-05 ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗ ಬಾರದೆಂದು ಅಧಿಕೃತ ಅಂಕಿ ಅಂಶಗಳನ್ನು ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳುವುದು ಕೊರೋನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್ ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ ಎಂದು ಅವರು ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು. ರೋಗದ ಕಾರಣ ತಿಳಿಯದೆ ಔಷಧಿ ಕೊಟ್ಟರೆ ರೋಗ ಗುಣವಾಗಲಾರದು ಎಂದು ವಿವರಿಸಿದ್ದಾರೆ.
ಲಾಕ್ ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಅದನ್ನು ಬೆಂಬಲಿಸಿತ್ತು. ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮವಾಗಿ ಅದರಿಂದ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನ ಮಂತ್ರಿಯವರೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
Hwdu