CRIMENEWSದೇಶ-ವಿದೇಶ

ಮೂರು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಅಂತ ಒಂದು ಮಗುವನ್ನು ಕಾಲುವೆ ಎಸೆದು ಕೊಂದ ಪಾಪಿ ತಂದೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ವ್ಯಕ್ತಿಯೊಬ್ಬ ನಾನು ಚುನಾವಣೆಗೆ ಸ್ಪರ್ಧಿಸಲು ಮೂರು ಮಕ್ಕಳಿದ್ದರೆ ಅವಕಾಶವಿಲ್ಲ ಎಂಬ ಕಾರಣಕ್ಕೆ ಅವಳಿ ಮಕ್ಕಳಲ್ಲಿ ಒಂದು ಹೆಣ್ಣುಮಗುವನ್ನು ಕಾಲುವೆಗೆ ತಳ್ಳಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ..

ಹೌದು! ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿದ್ದರೆ ಗ್ರಾಮ ಪಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ಪಾಂಡುರಂಗ ಕೊಂಡ್ಮಂಗಳೆ (28) ಎಂಬಾತ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.

ಪ್ರಾಚಿ (6) ಹತ್ಯೆಗೀಡಾದ ಮಗು. ಮಗುವನ್ನೇ ಕಾಲುವೆಗೆ ಎಸೆದು ಕೊಂದ ಪಾಪಿ ತಂದೆ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿ ಪಾಂಡುರಂಗ ಕೊಂಡ್ಮಂಗಳೆ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಆದರೆ ಮೂರು ಮಕ್ಕಳು ಇದ್ದಿದ್ದರಿಂದ ಇದು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾನೆ.

ಸದ್ಯ ನಿಜಾಮಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಆದರೆ ಈತನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಇದರಿಂದ ಅನರ್ಹನಾಗಿದ್ದ.

ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ಎಸೆದು ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

ಅಲ್ಲಿಯೇ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ನೀರಿಗೆ ಏನೋ ಬಿದ್ದ ಶಬ್ಧ ಕೇಳಿ, ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಫೋಟೋ ವೈರಲ್‌ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು, ಆರೋಪಿಗಳನ್ನು ಬಂಧಿಸಿದ್ದರು.

Megha
the authorMegha

Leave a Reply

error: Content is protected !!