ಬೆಂಗಳೂರು: ಕೊರೊನಾದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ನಿರೀಕ್ಷಿತ ಮಟ್ಟದಲ್ಲಿ ಹರಿದು ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರೂ.ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.
ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಆರ್ಥಿಕ ವಿತ್ತೀಯ ಕೊರತೆಯ ಇತಿಮಿತಿಯಲ್ಲಿಯೇ ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ನಿಂದಾಗಿ ರಾಜ್ಯ ಆರ್ಥಿಕ ಪರಿಸ್ಥಿತಿಗೆ ಪೆಟ್ಟು ಬಿದ್ದಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಕೊರೊನಾ ಸೋಂಕಿನ ಪರಿಣಾಮ ರಾಜ್ಯದ ಬೊಕ್ಕಸಕ್ಕೆ ಬರುತ್ತಿದ್ದ ಆದಾಯ ಕಡಿಮೆಯಾಗಿದೆ.
ಆರ್ಥಿಕ ಪರಿಸ್ಥಿತಿಯನ್ನು ಸರಿದೂ ಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಕಲ್ಪಿಸುವ ಉದ್ದೇಶದಿಂದ 33 ಸಾವಿರ ಕೋಟಿ ರೂ. ಸಾಲ ಪಡೆಯಲು ತೀರ್ಮಾನಿಸಲಾಗಿದೆ. ಹೀಗಾಗಿ ಹೊಸ ಸಾಲ ಪಡೆಯಲು ಅನುಕೂಲವಾಗುವ ರೀತಿ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಧಿನಿಯಮ ತಿದ್ದುಪಡಿಯಿಂದ ಹೊಸ ಸಾಲ ಪಡೆಯುವುದು ಸುಲಭವಾಗಲಿದೆ ಎಂದು ಹೇಳಿದರು.
So bad