ಚೆನ್ನೈ: ಖ್ಯಾತ ಹಿನ್ನೆಲೆಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ತಿಳಿಸಿದೆ.
ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಸುಬ್ರಮಣ್ಯಂ ಈಗಲೂ ಇಸಿಎಂಒ ಮತ್ತು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಗರಿಷ್ಠ ಲೈಫ್ ಸಪೋರ್ಟ್ ನೀಡಲಾಗಿದೆ. ಆಸ್ಪತ್ರೆಯ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ.
ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಎಸ್ ಪಿ ಬಿ ಅವರಿಗೆ ಆಗಸ್ಟ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು.
ವೈದ್ಯರ ಸಲಹೆಯಂತೆ ಎಂ.ಜಿ.ಆರ್. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ತಿಳಿಸಿದೆ.