ಬೆಂಗಳೂರು: ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಬಂದ್ ನಡುವೆ ಕೆಎಸ್‌ಆರ್‌ಟಿಸಿ ಬಿಎಂಟಿಸಿ ಸೇರಿ ನಾಲ್ಕು ನಿಗಮಗಳ ಬಸ್‌ಗಳ ಕಾರ್ಯಾಚರಣೆ ನಿತ್ಯದಂತೆ ನಡೆಯುತ್ತಿದೆ.
ಈ ನಡುವೆ ಬಂದ್‌ಗೆ ಕರೆ ನೀಡಿರುವ ಸಂಘಟನೆಗಳು ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಒತ್ತಾಯ ಮಾಡುತ್ತಿವೆ. ಇನ್ನು ಬೆಂಗಳೂರಿನ ಟೌನ್‌ಹಾಲ್ ಮುಂದೆ ರೈತಪರ ಮತ್ತು ಕನ್ನಡಪರ ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದು, ಏನು ಕಾಯ್ದೆ ತಿದ್ದುಪಡಿ ಮಾಡಿದ್ದೀರಿ ಅದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುತ್ತಿವೆ.
ಬಂದ್‌ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ 4 ಸಾವಿರ ಆರಕ್ಷಕರನ್ನು ನಿಯೋಜಿಸಲಾಗಿದೆ. ಹೀಗೆಯೇ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪೊಲೀಸ್ ಸರ್ಪಗಾವಲಿದೆ. ಪ್ರತಿಭಟನೆ ಅನ್ಯ ರೂಪಪಡೆದುಕೊಳ್ಳುವ ಸೂಚನೆ ಕಂಡು ಬಂದಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸಜ್ಜಾಗಿದೆ ಪೊಲೀಸ್ ಪಡೆ.
ಮೈಸೂರು, ಮಂಡ್ಯ, ರಾಯಚೂರು, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಹಾಸನ, ಕೊಡಗು, ರಾಮನಗರ, ಚಾಮರಾಜನಗರ, ಬೆಂ.ಗ್ರಾಮಾಂತರ ಸೇರಿ ರಾಜ್ಯದ 28 ಜಿಲ್ಲೆಗಳಲ್ಲಿ (ದಕ್ಷಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೊರತು ಪಡಿಸಿ) ಪ್ರತಿಭಟನೆ ಜೋರಾಗಿಯೇ ನಡೆಯುತ್ತಿದೆ.
ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಪ್ರತಿಭಟನಾಕಾರರು, ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದು, ಒಂದು ವೇಳೆ ಅದನ್ನು ಹಿಂಪಡೆಯದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ.
ಬೆಳಗ್ಗೆ 10.30ರ ವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ. ಆಕ್ರೋಶದ ನಡುವೆ ಹೋರಾಟಗಾರರು ಶಾಂತಿಯನ್ನು ಕಾಪಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣವೂ ಇದೆ, ಒಂದು ವೇಳೆ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡಿದರೆ ಆ ನಷ್ಟವನ್ನು ನಾಶ ಮಾಡಿದವರೆ ಬರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರು ಆಕ್ರೋಶದ ನಡುವೆಯೂ ತಾಳ್ಮೆಯನ್ನು ಕಾಯ್ದುಕೊಳ್ಳುತ್ತಿದ್ದಾರೆ.