ಬೆಂಗಳೂರು: ನವೆಂಬರ್ 3ರಂದು ಆರ್. ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯನ್ನು ಜೆಡಿಎಸ್ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲಿದೆ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಉಪ ಸಮರಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿ ಹರಿದಾಡಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸ್ಪಷ್ಟನೆ ನೀಡಿದರು.
ಆರ್.ಆರ್. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಆರ್.ಆರ್. ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ. ನಾವು ಕೂಡ ಮಾನಸಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಎಚ್ಡಿಕೆ ತಿಳಿಸಿದರು.
ಸಚಿವ ಕೆ.ಎಸ್. ಈಶ್ವರಪ್ಪ ಟೀಕೆ
ಈ ಎರಡೂ ಉಪಚುನಾವಣೆಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಡಿದಾಡುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ನಮ್ಮದೂ ಒಂದು ಪಕ್ಷ ಇದೆ ಎನ್ನುತ್ತಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಸರ್ಕಾರ ಹಾಗೂ ಸಿಎಂ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರೆಲ್ಲ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿರುವ ಅವರು, ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನು ಬಿಜೆಪಿಯೇ ಗೆದ್ದಿದೆ. ಕಾಂಗ್ರೆಸ್ನವರಿಗೇ ಈ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಭರವಸೆಯಿಲ್ಲ. ಇನ್ನು ಜೆಡಿಎಸ್ ಕೇಳಬೇಕೆ ಎಂದು ಈಶ್ವರಪ್ಪ ಎರಡೂ ಪಕ್ಷಗಳನ್ನು ಟೀಕಿಸಿದ್ದಾರೆ.