ಶಿರಾ (ತುಮಕೂರು): ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಯಾಗಿದ್ದು, ಹಿಂದೂಗಳ ಮೇಲೆ ದಾಳಿ ನಡೆಸಿದ್ದ ಎಸ್ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನುರಾಜ್ಯ ಮುಖ್ಯಮಂತ್ರಿಯಾಗಿದ್ದಾಗ ರದ್ದುಪಡಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಹಿನ್ನೆಲೆಯಲ್ಲಿ ಮತ ಪ್ರಚಾರಕ್ಕೆ ತಾಲೂಕಿನ ಚಿಕ್ಕನಹಳ್ಳಿ ಬಳಿ ಕಳ್ಳಂಬೆಳ್ಳ ಹಾಗೂ ಚಿಕ್ಕನಹಳ್ಳಿ ರ್ಯಾಲಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ವಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು ಇಂದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರಿ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಜತೆಗೆ ಹಿಂದುಳಿದವರ ನೆರವಿಗೂ ಬಾರಲಿಲ್ಲ. ಹೀಗಿದ್ದು ಇಂದು ಬಡವರ ಪರ ಎಂದು ಹೋದ ಕಡೆಗಳಲ್ಲಿ ಬೊಬ್ಬೆಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಹಿಂದೂಗಳ ಭಾವನೆಗಳ ಮೇಲೆ ಪರಿಣಾಮ ಬೀರಿದ್ದ ಮತ್ತು ಕೋಮು ಹಿಂಸಾಚಾರವನ್ನು ಪ್ರಚೋದಿಸಿದ್ದ ಟಿಪ್ಪು ಜಯಂತಿ ಆಚರಣೆ ಪರ ಸಿದ್ದರಾಮಯ್ಯ ಒಲವು ತೋರಿದ್ದರು. ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಟಿಪ್ಪು ವಿಚಾರ ತೆಗೆದುಕೊಂಡಿದ್ದರು ಎಂದು ದೂರಿದರು.
ಪ್ರಚಾರ ಸಭೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಮುಖಂಡರು ಇದ್ದರು.