ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಮಂಗಳವಾರ (ಇಂದು) ನಂಜಾವಧೂತ ಸ್ವಾಮೀಜಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸ್ಪಟಿಕಪುರ ಮಠದ ನಂಜಾವಧೂತ ಸ್ವಾಮೀಜಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆಗೆ ಬಂದು ಕೆಲ ಕಾಲ ಮಾತನಾಡಿದ್ದಾರೆ. ಈ ವೇಳೆ ನೀವು ತಪ್ಪು ಮಾಡಿಲ್ಲ ಎಂದ ಮೇಲೆ ಯಾವುದಕ್ಕೂ ಯಾರಿಗೂ ಹೆದರುವುದು ಬೇಕಿಲ್ಲ. ನಿಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನಕೊಡಿ ಎಂದು ಡಿಕೆಶಿಗೆ ಧೈರ್ಯ ತುಂಬಿದರು ಎನ್ನಲಾಗಿದೆ.
ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ನೀಡಿದ್ದಾರೆ. ನಿನ್ನೆ ದಾಳಿ ಮುಕ್ತಾಯವಾದ ಬಳಿಕ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಹೀಗಾಗಿ ಕನಕಪುರ ಬಂಡೆ ಇಂದು ಬೆಳಗ್ಗೆ 11 ಗಂಟೆಗೆ ಡಿಕೆಶಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.