ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಹೈ ಕಮಾಂಡ್ ಮಾತ್ರ ಗ್ರೀನ್ ಸಿಗ್ನಲ್ ನೀಡಿಲ್ಲ. ಈ ನಡುವೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ನಾಲ್ವರು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಬಿಳಾಗಿ ಶಾಸಕ ಮುರುಗೇಶ್ ನಿರಾಣಿ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಗಳು ನಮಗೆ ಆಶೀರ್ವಾದ ಮಾಡಿದ್ದೇ ಆದರೆ, ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ. ಇಲ್ಲದೇ ಹೋದರೂ ನಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಸಚಿವ ಸ್ಥಾನಕ್ಕಾಗಿ ನಾನು ಯಾರ ಮನೆ ಬಾಗಿಲಿಗೂ ಹೋಗುವುದಿಲ್ಲ. ಲಾಬಿಯನ್ನೂ ನಡೆಸುವುದಿಲ್ಲ ತಮ್ಮ ಸಚಿವ ಸಂಪುಟಕ್ಕೆ ನನ್ನನ್ನು ಸೇರ್ಪಡೆಗೊಳಿಸಿಕೊಳ್ಳಿ ಎಂದು ಎಂದಿಗೂ ಯಡಿಯೂರಪ್ಪ ಅವರ ಬಳಿ ಕೇಳಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನವೆಂಬರ್ 25ರ ಬಳಿಕ ಸಂಪುಟ ವಿಸ್ತರಣೆ ಕುರಿತು ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಕೇಳಿತ್ತಿದ್ದೇನೆಂದಿದ್ದಾರೆ.
ಪ್ರಸ್ತುತ, 34 ಸದಸ್ಯರಿರುವ ಸಂಪುಟದಲ್ಲಿ ಇನ್ನು ಆರು ಹುದ್ದೆಗಳು ಖಾಲಿ ಇದ್ದು, ಇತ್ತೀಚೆಗೆ ನಾಮನಿರ್ದೇಶಿತ ಎಂಎಲ್ ಸಿಗಳಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಎ.ಎಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
ಈ ನಡುವೆ ದೊಡ್ಡನಗೌಡ ಪಾಟೀಲ್ ಹಾಗೂ ಮುರುಗೇಶ್ ನಿರಾಣಿಯವರು ತಮಗೆ ಸಂಪುಟದಲ್ಲಿ ಸ್ಥಾನ ಸೇರ್ಪಡೆಗೊಳಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಪಕ್ಷಕ್ಕಾಗಿ ನಮ್ಮ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ರಾಜಕಾರಣಿ ತಮ್ಮ ರಾಜಕೀಯ ಜೀವನದಲ್ಲಿ ಒಮ್ಮೆಯಾದರೂ ಸಚಿವನಾಗಬೇಕೆಂದು ಕನಸು ಕಾಣುತ್ತಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಎಂದು ಶಾಸಕ ನಡಹಳ್ಳಿ ಹೇಳಿದ್ದು, ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲಾಗುತ್ತಿದೆ ಎಂಬುದನ್ನು ತಳ್ಳಿಹಾಕಿದ್ದಾರೆ.