ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಕೋವಿಡ್ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿದ್ದು, ಸೋಮವಾರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ನಂತರ ಈ ವರದಿಯ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಗುತ್ತದೆ. ಈ ವರದಿ ಶಾಲೆಗಳ ಪುನರಾರಂಭದ ಬಗ್ಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಅಭಿಪ್ರಾಯಗಳನ್ನು ಒಳಗೊಂಡಿದೆ.
ಇಂದಿನ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಶಾಲೆಗಳ ಆರಂಭದ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಡಿಸೆಂಬರ್ ನಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂಬ ಮಾತುಗಳು ಕೇಳಿಬರುತ್ತಿವೆಯಾದರೂ ಆತುರದ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಈಗಾಗಲೇ ಹೇಳಿದ್ದಾರೆ. ಎಲ್ಲವನ್ನು ಸಮಗ್ರವಾಗಿ ಚರ್ಚಿಸಿದ ನಂತರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಇಂದಿನ ಸಭೆಯಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.