ಹಾಸನ: ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಮತಗಳನ್ನು ವರ್ಗಾಯಿಸಿದ ಕಾರಣ ಆರ್‌ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಅರಸಿಕೇರೆ ತಾಲೂಕಿನ ಹೊರಿಮಂಗಲಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಪ ಚುನಾವಣೆಯಲ್ಲಿ ಆಂತರಿಕ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಕಳೆದುಕೊಂಡಿದ್ದು, ಬಿಜೆಪಿ ಅದರ ರಾಜಕೀಯ ಲಾಭ ಪಡೆದುಕೊಂಡಿದೆ ಎಂದು ವ್ಯಂಗ್ಯವಾಡಿದರು. ಇನ್ನು ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ನಾಯಕರು ಚುನಾವಣೆಗೂ ಮುನ್ನವೇ ಬಿಜೆಪಿಗೆ ಶರಣಾಗಿದ್ದಾರೆ ಎಂದರು.
ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕಾರ್ಯಗಳ ಸೋಗಿನಲ್ಲಿ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸ್ಟಾರ್ ಹೋಟೆಲ್‌ಗಳಲ್ಲಿ ಹೆಚ್ಚು ಸಮಯ ಕಳೆದರು ಎಂಬ ಆರೋಪ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು ಎಂದು ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.