ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ
ಜಗತ್ತಿನಾದ್ಯಂತ ಅತಿಯಾಗಿ ಮರಗಳನ್ನು ಕಡಿದು ಹಾಕುವುದು ಹಾಗೂ ಪ್ರಕೃತಿಯ ಸಮತೋಲನವನ್ನು ಹಾಳು ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕುಣಿಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಡಾ.ವಿ.ನಾಗಭೂಷಣ ರೆಡ್ಡಿ ಅವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಗತ್ತಿನಾದ್ಯಂತ ಅತಿಯಾಗಿ ಮರಗಳನ್ನು ಕಡಿದು ಹಾಕುವುದು ಹಾಗೂ ಪ್ರಕೃತಿಯ ಸಮತೋಲನವನ್ನು ಹಾಳು ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಇದರ ಪರಿಣಾಮವಾಗಿ ಋತುಚಕ್ರದಲ್ಲಿ ವ್ಯತ್ಯಾಸ ಉಂಟಾಗಿ ಮಳೆಯ ಪ್ರಮಾಣ ಮತ್ತು ಸಮಯದಲ್ಲಿ ಅನಿಶ್ಚಿತತೆ ಕಂಡುಬರುತ್ತಿದ್ದು, ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುವ ಕೋಟ್ಯಂಂತರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದ ಅವರು, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶ್ವ ಗ್ರಾಮೋದಯ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ರೈತರಿಗೆ ಉಚಿತವಾಗಿ ಗಿಡಗಳನ್ನು ವಿತರಿಸುವ ಮೂಲಕ ಸಂಸ್ಥೆ ಪರಿಸರ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ರೈತರು ಹಾಗೂ ಶಾಲಾ ಮಕ್ಕಳಿಗೆ ತಲಾ ಎರಡು ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು. ವಿಶ್ವ ಗ್ರಾಮೋದಯ ಸಂಸ್ಥೆಯ ಕಾರ್ಯದರ್ಶಿ ವಿ. ದಾಸಣ್ಣ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಹಸಿರು ವಾತಾವರಣ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು. ಮಕ್ಕಳಲ್ಲಿ ಪರಿಸರದ ಬಗ್ಗೆ ಪ್ರೀತಿ ಮತ್ತು ಕಾಳಜಿ ಬೆಳೆಸುವ ಅಗತ್ಯವನ್ನು ಅವರು ಒತ್ತಿಹೇಳಿದರು.
ಕಾರ್ಯಕ್ರಮ ನಿರೂಪಣೆಯನ್ನು ಮುಖ್ಯ ಶಿಕ್ಷಕ ರವಿ ನಿರ್ವಹಿಸಿದರು. ಶಿಕ್ಷಕ ಭೀಮಯ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಗ್ರಾಮೋದಯ ಸಂಸ್ಥೆಯ ಎಚ್.ಆರ್.ದೇವರಾಜ್, ರಾಷ್ಟ್ರೀಯ ಕಿಸಾನ್ ಸಂಘದ ತಾಲೂಕು ಕಾರ್ಯದರ್ಶಿ ವೆಂಕಟ ರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯ ಸುಬ್ಬಪ್ಪ, ಮುಖಂಡರಾದ ಧರ್ಮಪಾಲ್, ಮಂಜುನಾಥ್, ಧನುರಾಜ್, ಶಾಲಾ ಮಕ್ಕಳು, ಗ್ರಾಮಸ್ಥರು ಹಾಗೂ ರೈತರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
Related









