ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾರೆ.
ತಮ್ಮ ಕರ್ತವ್ಯದ ನಡುವೆಯೂ ಸಾವಿರ ಸಾವಿರ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಾರಿಗೆ ನೌಕರರು ಸರ್ಕಾರಕ್ಕೆ ಸ್ಪಷ್ಟ ಸಂದೇಶ ಸಾರಿದ್ದು, ನಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಅದಕ್ಕೆ ಸರ್ಕಾರ ಅವಕಾಶ ಕೊಡದೆ ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಾರಿಗೆ ನೌಕರರ ಜಾಥಾ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭಗೊಂಡು ಸ್ವಾತಂತ್ರ್ಯ ಉದ್ಯಾನದ ವರೆಗೆ ಸಾಗಿದೆ. ಈ ಫ್ರೀಡಂ ಪಾರ್ಕ್‌ನಲ್ಲಿ ಜಮಾವಣೆಗೊಂಡ ಸಾವಿರಾರು ಸಾರಿಗೆ ನೌಕರರ ಮತ್ತು ಕುಟುಂಬದ ಸದಸ್ಯರು ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ನಡೆಯುವ ಎಲ್ಲಾ ಪರಿಸ್ಥಿಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಲಿ ಎಂಬ ಸ್ಪಷ್ಟ ಸಂದೇಶವನ್ನು ನೀಡಿದರು.
ಇನ್ನು ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ವಿಧಾನಸೌಧದವರೆಗೆ ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೊರಡಲಿದೆ. ಈ ಹೋರಾಟ ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ವರೆಗೆ ನಿರಂತರವಾಗಿ ಸಾಗಲಿದೆ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಎನ್‌ಇಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಸೇರಿ ರಾಜ್ಯದಲ್ಲಿ 1.35 ಲಕ್ಷ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ 10 ಸಾವಿರಕ್ಕೂ ಹೆಚ್ಚು ನೌಕರರು ಮತ್ತು ಅವರ ಕುಟುಂಬ ಸದಸ್ಯರು ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಭಾಗವಹಿಸಿ ತಮ್ಮ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ಸಾರಿಗೆ ನೌಕರರ ಚಿಕ್ಕಚಿಕ್ಕ ಮಕ್ಕಳು ಮಾಧ್ಯಮಗಳೊಂದಿಗೆ ಮಾತನಾಡಿ ನಮ್ಮ ಅಪ್ಪ, ಅಮ್ಮ ಹಲವಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ನಮ್ಮನ್ನು ಓದಿಸಲು ಬೇಕಾದಷ್ಟು ವೇತನ ಸಿಗುತ್ತಿಲ್ಲ. ಇನ್ನು ಸಂಸಾರವನ್ನು, ಅದು ಇಂಥ ಮಹಾನಗರದಲ್ಲಿ ನಿಭಾಯಿಸುವುದು ಹೇಗೆ ಎಂದು ಸಿಎಂ ಅವರನ್ನು ಪ್ರಶ್ನಿಸಿದ್ದು, ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆ ಪುಟ್ಟಪುಟ್ಟ ಮಕ್ಕಳು ಕೇಳಿಕೊಂಡರು.