- ವಿಜಯಪಥ ಸಮಗ್ರ ಸುದ್ದಿ
ಚಿಕ್ಕಮಗಳೂರು: ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ಅಂತ್ಯಕ್ರಿಯೆ ಸರಪನಹಳ್ಳಿಯ ಅವರ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದ ವಿಧಿವಿಧಾನದ ಜತೆಗ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಗೂ ಮುನ್ನ ಗಾರ್ಡ್ ಆಫ್ ಆನರ್ ಗೌರವ ಸಲ್ಲಿಸಲಾಯಿತು. ಧರ್ಮೇಗೌಡ ಅವರ ಮಗ ಸೋನಾಲ್ ಅಂತಿಮ ವಿಧಿವಿಧಾನದ ಪೂಜೆ ನಡೆಸಿ, ತಂದೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಈ ಸಂದರ್ಭದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್, ಎಚ್.ಡಿ.ರೇವಣ್ಣ, ಶಾಸಕ ಶಿವಲಿಂಗೇಗೌಡ, ಸಿ.ಟಿ.ರವಿ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಸಖರಾಯಪಟ್ಟಣದ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ತಮ್ಮ ನೆಚ್ಚಿನ ಜನನಾಯಕನ ನಿಧನದ ಹಿನ್ನೆಲೆಯಲ್ಲಿ ಸಖರಾಯಪಟ್ಟಣದ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತರಾಗಿ ಬಾಗಿಲು ಬಂದ್ ಮಾಡಿದವು.
ಧರ್ಮೇಗೌಡ ಅವರ ಅಕಾಲಿಕ ಸಾವಿಗೆ ಪಕ್ಷಾತೀತವಾಗಿ ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಧರ್ಮೇಗೌಡರ ಸಾವು ತುಂಬಾ ನೋವುಂಟು ಮಾಡಿದೆ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್. ಡಿ. ಕುಮಾರಸ್ವಾಮಿ ಕೂಡ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಸಮರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ತಮ್ಮ ಪಕ್ಷದ ಹಿರಿಯ ಮುಖಂಡರನ್ನು ಕಳೆದುಕೊಂಡಿದ್ದಕ್ಕೆ ಕುಮಾರಸ್ವಾಮಿಯವರು ಕಣ್ಣೀರಿಟ್ಟರು.
ಧರ್ಮೇಗೌಡ ಅವರ ಸ್ನೇಹಿತರಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಅವರ ಡೆತ್ ನೋಟ್ ಬಹಿರಂಗ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಸಾರ್ವಜನಿಕ ಜೀವನದಲ್ಲಿದ್ದವರು ಹೀಗಾಗಿ ಅವರ ಸಾವಿಗೆ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ದುರ್ಬಲ ವ್ಯಕ್ತಿ ಅಲ್ಲ. ಅವರ ಸಾವಿಗೆ ನಿಖರ ಕಾರಣದ ಬಗ್ಗೆ ತನಿಖೆ ನಡೆಯಬೇಕು. ಅವರ ಆತ್ಮಹತ್ಯೆಯಿಂದ ರಾಜ್ಯಕ್ಕೆ, ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ಕಣ್ಣೀರಿಟ್ಟರು.