ವಿಜಯಪಥ ಸಮಗ್ರ ಸುದ್ದಿ
ಮೈಸೂರು: ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಬಿಜೆಪಿ ಕರ್ನಾಟಕ ಮಾಧ್ಯಮ ವಿಭಾಗ ಆಯೋಜಿಸಿದ್ದ ಕೇಂದ್ರ ಬಜೆಟ್ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್-19 ಸಂಕಷ್ಟವು ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಾಗಾಗಿ ಅನಿವಾರ್ಯವಾಗಿ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಬೇಕಿದೆ. ಇದರಿಂದ ಸಾರ್ವಜನಿಕರಿಗೆ ಸ್ವಲ್ಪ ತೊಂದರೆ ಆಗಬಹುದು. ಆದರೆ ಮುಂದೆ ಎಲ್ಲವೂ ಸರಿಯಾಗಲಿದೆ ಎಂದರು.
ದೇಶ ಮತ್ತು ರಾಜ್ಯದ ಜನರ ಹಿತ ನಮಗೆ ಮುಖ್ಯ. ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದಿಂದ ದಿನಬಳಕೆ ವಸ್ತುಗಳ ಬೆಲೆಯೂ ಸ್ವಲ್ಪ ಹೆಚ್ಚಾಗಿದೆ. ನಮಗೆ ಸಾರ್ವಜನಿಕರ ಮೇಲೆ ಹೊರೆ ಹೇರಬೇಕು ಎಂಬ ಉದ್ದೇಶವಿಲ್ಲ. ಆದರೆ ಆರ್ಥಿಕ ಸಮಸ್ಯೆ ಸರಿದೂಗಿಸಲು ಹೆಚ್ಚಳ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದರು.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನವನ್ನು ನೀಡಿದ್ದಾರೆ. 33 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, 1197 ಕಿಮಿ ರಸ್ತೆ ನಿರ್ಮಾಣಕ್ಕೆ 10 904 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದರು.
ಇತ್ತೀಚೆಗೆ ನಿಧನರಾದ ವಿಧಾನಪರಿಷತ್ ಉಪಾಸಭಾಪತಿ ಧರ್ಮೇಗೌಡ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಚ್.ವಿಶ್ವನಾಥ್ ನನ್ನನ್ನು ಆಯ್ಕೆ ಮಾಡಬೇಕೆಂದು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸೋಮಶೇಖರ್, ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಯ್ಕೆಯಾಗಿದ್ದವರು. ವಿಶ್ವನಾಥ್ ಅವರನ್ನು ಎಲ್ಲಿಂದ ಆಯ್ಕೆ ಮಾಡಬೇಕು. ಅಲ್ಲದೆ ಇದು ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಯಾರು ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೊ ಅವರು ಅಸ್ತಿತ್ವ ಕಳೆದುಕೊಂಡಿದ್ದಾರೆ. ಅದಕ್ಕೆ ಅಹಿಂದ ಹೆಸರಿನಲ್ಲಿ ಮುಂಚೂಣಿಗೆ ಬರಲು ಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ಸೋಮಶೇಕರ್ ಕುಟುಕಿದರು.
ಚುನಾವಣೆಗೆ ಇನ್ನೂ ಎರಡು ವರ್ಷಕಾಲ ಇದೆ. ಇಂತಹ ಪರಿಸ್ಥಿತಿಯಲ್ಲಿ ಅಹಿಂದ ಅಗತ್ಯವಿಲ್ಲ ನಮ್ಮ ಸ್ವಂತ ವ್ಯಕ್ತಿತ್ವ ಉಳಿಸಿಕೊಳ್ಳಲು ಮಾಡುತ್ತಿರುವ ತಂತ್ರ ಎಂದು ವಾಗ್ದಾಳಿ ನಡೆಸಿದರು.
ಶಾಸಕ ಎಲ್.ನಾಗೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಂಜುನಾಥ, ನಗರ ಬಿಜೆಪಿ ಅಧ್ಯಕ್ಷರಾದ ಮಂಗಳ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ, ಮುಡಾ ಅಧ್ಯಕ್ಷ ಸೇರಿ ಮತ್ತಿತರರು ಉಪಸ್ಥಿತರಿದ್ದರು.