ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಗುರುವಾರ ಮಾತನಾಡಿದ ಅವರು, ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರಲು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ನಿರ್ಧರಿಸಿದ್ದರು. ಆದರೆ, ಪಕ್ಷದ ಕಾರ್ಯಕರ್ತರ ಒತ್ತಾಯದಿಂದಾಗಿ ಯೋಜನೆಯನ್ನು ಪುನರ್ ಪರಿಶೀಲಿಸಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಜತೆಗೆ ಸಮಾನ ಹೋರಾಟದೊಂದಿಗೆ ಚುನಾವಣೆ ನಡೆಸಲಿದ್ದೇವೆ ಎಂದು ಹೇಳಿದರು.
ಹೈದರಾಬಾದ್-ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದರೆ ಸಾಲದು. ಅಭಿವೃದ್ಧಿಗೆ ಹಣವನ್ನು ನೀಡಬೇಕು. ಆದರೆ ದುರದೃಷ್ಟವಶಾತ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಕಾಳಜಿ ಇಲ್ಲ ಎಂದು ದೂರಿದರು.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೊಂದಾಣಿಕೆ ಸಂಬಂಧ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅದು ಸ್ಥಳೀಯ ನಾಯಕರ ನಡುವಿನ ಹೊಂದಾಣಿಕೆ ಎಂದಷ್ಟೇ ಹೇಳಿದರು.