ವಿಜಯಪಥ ಸಮಗ್ರ ಸುದ್ದಿ
ಉಡುಪಿ: ಕೊರೊನಾ ಲಾಕ್ಡೌನ್ ಬಳಿಕ ದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಹಾರ ಪದಾರ್ಥಗಳ ಬೆಲೆ ಏರಿಕೆ, ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳ, ಗ್ಯಾಸ್ ಸಬ್ಸಿಡಿ ಸ್ಥಗಿತ, ಕೃಷಿ ಕಾಯ್ದೆ ತಿದ್ದುಪಡಿ ಮೂಲಕ ಜನವಿರೋಧಿ ನೀತಿಗಳನ್ನು ಜಾರಿಗೆ ತಂದಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಬೈಂದೂರು ನೂತನ ಬಸ್ ನಿಲ್ದಾಣದ ಬಳಿ ಶನಿವಾರ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಹೆಜಮಾಡಿಯಿಂದ ಆರಂಭಿಸಿದ್ದ ಜನಧ್ವನಿ ಪಾದಯಾತ್ರೆ ಸಮಾರೋಪದಲ್ಲಿ ಮಾತನಾಡಿದರು.
ಉಡುಪಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಸಚಿವರು ಇದ್ದಾರೆ. ಆದರೆ ಜನರ ಪರವಾಗಿ ಧ್ವನಿಯೆತ್ತುತ್ತಿಲ್ಲ. ಜನರ ಬದುಕಿನಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ ಜನರ ಧ್ವನಿಯಾಗಬೇಕು. ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ನಮ್ಮ ಕರ್ತವ್ಯದಂತೆ ಜನರೊಂದಿಗೆ ಬೆರೆತು ಕೆಲಸ ಮಾಡಬೇಕು ಎಂಬ ನೆಲೆಯಲ್ಲಿ ಜನಧ್ವನಿ ಪಾದಯಾತ್ರೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದರು.
ಜನರಿಗೆ ಆರ್ಥಿಕ ಶಕ್ತಿ ನೀಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದರು. ಆದರೆ ಮೋದಿ ಸರಕಾರ ಕರಾವಳಿಯ ನಾಲ್ಕು ಬ್ಯಾಂಕುಗಳನ್ನು ವಿಲೀನಗೊಳಿಸುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಬೇಕಾದ ಕರಾವಳಿ ಭಾಗದ ಸಂಸದರಾದ ಸದಾನಂದಗೌಡ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಬಿ.ವೈ. ರಾಘವೇಂದ್ರ ಎಲ್ಲಿಗೆ ಹೋಗಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲೆಗಳ ಬ್ಯಾಂಕುಗಳನ್ನು ವಿಲೀನ ಮಾಡುವಾಗ ತುಟಿಬಿಚ್ಚದೆ ಎಲ್ಲಿ ಕುಳಿತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಸ್ವಾಗತಿಸಿ ಪ್ರಸ್ತಾವಿಕು ನುಡಿಗಳನ್ನಾಡಿದರು. ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಮುಖಂಡರಾದ ಗೌರಿ ದೇವಾಡಿಗ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ ನಿರೂಪಿಸಿದರೆ, ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.