ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ಆಬಳಿಕ ಮತ್ತೆ ಸಚಿವನಾಗುತ್ತೇನೆಂದು ರಮೇಶ್ ಜಾರಕಿಹೊಳಿ ಹೇಳಿದ್ದು, ನಾನು ಇ ಎಲ್ಲಾ ಆರೋಪಗಳಿಂದ ಮುಕ್ತನಾ ಮೇಲೆ ನನಗೆ ಮತ್ತೆ ಇದೆ ಖಾತೆ ನೀಡಿ ಸಚಿವರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರೆ ಎಂದು ಮೂಲಗಳು ತಿಳಿಸಿವೆ.
ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಕೆಯಾಗಿದೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತಸ್ಥಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ವಿರುದ್ಧ ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನ ನಡೆದವು. ಆ ಬಳಿಕ ಸಿಎಂ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಈ ಪ್ರಕರಣ ಕುರಿತು ತನಿಖೆಯಾಗಬೇಕು ನಿರ್ದೋಷಿಯೆಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ ಎಂದು ಹೇಳಿದ್ದರು. ಈ ವಿಚಾರವಾಗಿ ನೇರವಾಗಿ ಬಿಜೆಪಿ ವಿರುದ್ಧ ಟೀಕೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅಧಿವೇಶನಕ್ಕೂ ಮುನ್ನವೇ ರಮೇಶ್ ಅವರು ರಾಜೀನಾಮೆ ನೀಡದಿದ್ದರೆ ಅಧಿವೇಶನದಲ್ಲಿ ಈ ಬಗ್ಗೆ ನಾವೇ ವಿಚಾರ ಸ್ಥಾಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸರ್ಕಾರ
ಬಜೆಟ್ ಅಧಿವೇಶನ ಆರಂಭವಾಗುವ ಈ ಹೊತ್ತಿನಲ್ಲೇ ಬಿಜೆಪಿಯ ಸಚಿವರೊಬ್ಬರ ರಾಸಲೀಲೆ ಪ್ರಕರಣ ಬಯಲಾಗುತ್ತಿದಂತೆ ವಿಪಕ್ಷಗಳ ಬಾಯಿಗೆ ಆಹಾರವಾಗುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಚಿವರ ರಾಜೀನಾಮೆ ಪಡೆಯುವ ಮೂಲ ವಿಪಕ್ಷಗಳ ಬಾಯಿಗೆ ಬೀಕ ಹಾಕಿದೆ.
ಇದಲ್ಲದೇ ಈ ಪ್ರಕರಣವನ್ನೇ ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಖಚಿತ ಎಂಬುವುದು ತಿಳಿಯುತ್ತಿದ್ದಂತೆ ಬೀಸೋ ದೊಣ್ಣೆಯಿಂದ ಪಾರಾಗಲು ರಾಜೀನಾಮೆ ಪಡೆದಿದ್ದು ಮುಂದಿನ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದೆ.