ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3,498 ಮಂದಿ ಸಾವನ್ನಪ್ಪಿದ್ದಾರೆ.
ದುರಂತವೆಂದರೆ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಕಟ್ಟಿಗೆ (ಸೌದೆ) ಸಿಗುತ್ತಿಲ್ಲ ಎಂದು ಹಲವೆಡೆ ಕೇಳಿಬರುತ್ತಿರುವುದು ದೇಶದ ಜನರನ್ನು ಅಚ್ಚರಿ ಮತ್ತು ಆತಂಕಕ್ಕೆ ದೂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ ಪತ್ತೆಯಾಗಿರುವ ಪಾಸಿಟಿವ್ ಕೇಸ್ ಸೇರಿದಂತೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,08,330ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,70,228ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,97,540 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,53,84,418ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 19,20,107 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,63,92,086 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ನೀಡಿದ ವರದಿಯಿಂದ ತಿಳಿಸು ಬಂದಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ.
ಇನ್ನು ನಾಳೆಯಿಂದ (ಮೇ 1) 18+ ವಯಸ್ಸಿನವರಿಗೂ ಲಸಿಕೆ ನೀಡುವುದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಣೆ ಮಾಡಿವೆ ಆದರೆ, ಲಸಿಕೆ ಲಭ್ಯವಿಲ್ಲ ಎಂಬ ಮಾಹಿತಿಯನ್ನು ಸರ್ಕಾರ ನೀಡಿದೆ.