ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ಕೊರೊನಾ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರಿದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ರಾಜ್ಯದಲ್ಲಿ ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂಪ್ಪ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಸಿಎಂ ಅವರನ್ನು ಒತ್ತಾಯಿಸಿದ್ದಾರೆ.