ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬುಧವಾರ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ಕರ್ನಾಟಕದಲ್ಲಿ ಇನ್ನೂ ಕೊರೊನಾ ಪ್ರಕರಣ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್‌ಡೌನ್ ಮುಂದುವರಿಸಲಾಗುವುದು ಲಾಕ್ಡೌನ್ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಲಾಕ್ಡೌನ್ನಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ಕೆಲವೊಂದಕ್ಕೆ ಮಾತ್ರ ವಿನಾಯಿತಿ ಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಲಾಕ್‌ಡೌನ್ ಸಡಿಲ ಹೇಗೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದರು.
ಜೂನ್ 7ರ ನಂತರವೂ ಲಾಕ್‌ಡೌನ್ ವಿಸ್ತರಣೆಗೆ ನಿರ್ಧರಿಸಲಾಗಿದೆ. ವಿಸ್ತರಣೆ ಮಾಡಿ ಬಿಗಿ ಕ್ರಮ ಏನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.