ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್-19 ಎರಡನೇ ಅಲೆಯ ಕಾರಣ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ, ಅಸಂಘಟಿತ ವಲಯದ ಹನ್ನೊಂದು ವರ್ಗಗಳ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ 2000 ರೂ.ಗಳ ನೆರವನ್ನು ನೀಡಲು ಸರ್ಕಾರ ಘೋಷಿಸಿರುವ ಹಿನ್ನೆಲೆ, ಅರ್ಹರು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಅಸಂಘಟಿತ ವರ್ಗದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್ ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೈ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು ಮಾತ್ರ ಈ ಯೋಜನೆಯಡಿ ಫಲಾನುಭವಿಗಳಾಗಿದ್ದು, 2020ನೇ ಸಾಲಿನಲ್ಲಿ ಒಂದು ಬಾರಿಯ ನೆರವು ಪಡೆದ ಅಗಸರು ಮತ್ತು ಕ್ಷೌರಿಕ ಫಲಾನುಭವಿ ಕುಟುಂಬಗಳು ಮತ್ತೆ ಪ್ರತ್ಯೇಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ನೆರವು ಪಡೆಯದ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಕುಟುಂಬದ ಒಬ್ಬ ಕಾರ್ಮಿಕರು ಅರ್ಜಿ ಸಲ್ಲಿಸಬಹುದು.
2021ರ ಮೇ 19ರ ಅಂತ್ಯದವರೆಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅರ್ಜಿ ಸಲ್ಲಿಸಿ ನೋಂದಣಿಯಾದ ಬಿ.ಪಿ.ಎಲ್ ಕುಟುಂಬದ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಇತರೆ ಸದಸ್ಯರು ನೆರವು ಕೋರಿ ಮತ್ತೊಮ್ಮೆ ಪ್ರತ್ಯೇಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ಸದರಿ ವರ್ಗಗಳ 60 ವರ್ಷ ಮೇಲ್ಪಟ್ಟ ಆದರೆ, 65 ವರ್ಷ ಪೂರೈಸದ ಕಾರ್ಮಿಕರು ಸಹ ಅರ್ಜಿ ಸಲ್ಲಿಸಬಹುದು.
ಆಸಕ್ತರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಫಲಾನುಭವಿಗಳಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಘೋಷಿತ ನೆರವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಆಧಾರಿತ ಡಿ.ಬಿ.ಟಿ. ಮೂಲಕ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.