ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಆರ್ಥಿಕ ನೆರವು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ 3,000 ರೂ. ಆರ್ಥಿಕ ನೆರವು ನೀಡಲಾಗುವುದು. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿಬಿಟಿ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.
ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗೂ ಅಧಿಕ ಮೊತ್ತದ ಆರ್ಥಿಕ ನೆರವು ಪ್ಯಾಕೇಜ್ ಘೋಷಿಸಲಾಗಿದೆ. ಹೂವು, ಹಣ್ಣು-ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿ ಮೊದಲಾದವರಿಗೆ ನೇರವಾಗಿ ಖಾತೆಗೆ ಹಣ ವರ್ಗಾಯಿಸಲಾಗಿದೆ ಎಂದರು.
ಕನ್ನಡ, ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ್ ಲಿಂಬಾವಳಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.