ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಪರೀಕ್ಷೆ ನಡೆಸುವ ಮೂಲಕ ಮಕ್ಕಳ ಜ್ಞಾನ ವೃದ್ಧಿಗೆ ಸಹಕಾರವಾಗಬೇಕು ಎಂದು ಶಿಕ್ಷಣ ಇಲಾಖೆ ಜುಲೈ 19 ಹಾಗೂ 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಶಿಕ್ಷಣ ಇಲಾಖೆಯಿಂದ ಸಭೆ ನಡೆದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ʻಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ನಡೆಯಲಿದೆ. ಬೆಳಗ್ಗೆ 10.30ರಿಂದ 1.30 ಗಂಟೆ ಪರೀಕ್ಷೆ ನಡೆಯಲಿದೆʼ ಎಂದು ಘೋಷಿಸಿದರು.
ಈ ವರ್ಷ 8,76,581 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ 8 ಲಕ್ಷದ 46 ಸಾವಿರ ವಿದ್ಯಾರ್ಥಿಗಳಿದ್ದರು. ಎಸ್ಎಸ್ಎಲ್ಸಿ ಪರೀಕ್ಷೆಗೆಂದೇ ಈ ವರ್ಷ 73,066 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಳೆದ ಬಾರಿಯಂತೆಯೇ ಈ ಬಾರಿಯೂ ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರವಾಗಿರಲಿವೆ. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಪರೀಕ್ಷಾ ತುರ್ತು ಸಿದ್ಧತೆಯನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಸಾರ್ವಜನಿಕ ಅಂತರ ಕಾಪಾಡಿಕೊಳ್ಳಲು ಆರು ಆಡಿಗೆ ಒಂದರಂತೆ ಆಸನ ವ್ಯವಸ್ಥೆ ಮಾಡಲಾಗುತ್ತಿದ್ದು, ಕೊಠಡಿಯಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಜತೆಗೆ, ಸಿಸಿ ಕ್ಯಾಮರಾ ಅಳವಡಿಕೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.