ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಗಸ್ಟ್ 14ರಂದು ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಎಂ.ಎಲ್. ರಘುನಾಥ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ನ್ಯಾಯಲಯದ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ಒಟ್ಟು 1,07,172 ಪ್ರಕರಣಗಳು ಬಾಕಿ ಇವೆ.
ಅವುಗಳ ಪೈಕಿ 81,328 ಪ್ರಕರಣ ರಾಜಿಯಾಗಬಹುದೆಂದು ಅಂದಾಜಿಸಲಾಗಿದ್ದು, ಇಂತಹ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.
ಮೋಟಾರ್ ವಾಹನಗಳ ಅಪಘಾತ ಪ್ರಕರಣ, ಕೌಟುಂಬಿಕ ಕಲಹ ಪ್ರಕರಣಗಳ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿರುವಂತಹ ಪ್ರಕರಣಗಳ ರಾಜಿ ಸಂಧಾನಕ್ಕಾಗಿ ಕ್ರಮವಹಿಸಲಾಗುವುದು ಎಂದರು.