ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು ಹಾಗೂ ಪ್ರಕರಣದ ನೈತಿಕ ಹೊಣೆಹೊತ್ತು ಪ್ರಧಾನಿ
ನರೇಂಧ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರವಾಗಿ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಕೇವಲ ಫೋನ್ ಕದ್ದಾಲಿಕೆ ಮಾತ್ರವಲ್ಲ ಫೋನ್ ಹ್ಯಾಕ್ ಮಾಡಿ ಸಂಪೂರ್ಣ ಮಾಹಿತಿಯನ್ನೂ ಕದಿಯಲಾಗಿದೆ ಎಂದು ಆರೋಪಿಸಿದ್ದಾರೆ.
ಹಲವು ಮಂದಿ ನ್ಯಾಯಾಧೀಶರು ಸೇರಿದಂತೆ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತ ಸಹಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ದೂರವಾಣಿಗಳನ್ನು ಕದ್ದಾಲಿಸಲಾಗಿದೆ ಎಂದು ಕಿಡಿಕಾರಿದರು.
ಇದು ವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿ. ಬೇರೆಯವರ ವೈಯಕ್ತಿಕ ಬದುಕಿನಲ್ಲಿ ಇಣುಕಿ ನೋಡುವ ಕೀಳು ಮಟ್ಟಕ್ಕೆ ಕೇಂದ್ರ ಬಿಜೆಪಿ ನಾಯಕರು ಇಳಿಯಬಾರದಿತ್ತು. ಈ ಬಗ್ಗೆ ತನಿಖೆ ನಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.