ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 110 ಪೌರಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ತಮ್ಮನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪಾಲಿಕೆಯು ಜಾರಿಗೆ ತಂದಿದ್ದ ಪೌರಕಾರ್ಮಿಕರಿಗೆ ವೇತನ ʻನೇರ ಪಾವತಿʼ ಪಟ್ಟಿಯಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 110 ಪೌರಕಾರ್ಮಿಕರ ಹೆಸರನ್ನು ತೆಗೆಯಲಾಗಿದೆ. ಹೀಗಾಗಿ, ಅವರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ.
ನಂತರ ಕರ್ತವ್ಯದಿಂದ ಏಕಾಏಕಿ ವಜಾಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಈ ನಡೆ ಖಂಡನೀಯʼ ಎಂದು ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಈ ರೀತಿ ಏಕಾಏಕಿ ಕರ್ತವ್ಯದಿಂದ ವಜಾಗೊಳಿಸುವುದು ಸರಿಯಲ್ಲ. ಕುಟುಂಬದ ನಿರ್ವಹಣೆ ಜವಾಬ್ದಾರಿಯೂ ನಮ್ಮ ಮೇಲಿದೆ. ಕೋವಿಡ್ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲೇ ನೂರಾರು ಪೌರಕಾರ್ಮಿಕರನ್ನು ವಜಾಗೊಳಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಈ ಸಂಬಂಧ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಪರಿಶೀಲಿಸಿ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.