ಬೆಂಗಳೂರು: ಪ್ರಮುಖವಾಗಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳಲೂ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ದೆಹಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಗುರುವಾರ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಇತರ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮೇಕೆದಾಟು ಯೋಜನೆ ಕುರಿತು ಸಚಿವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಶಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಹಲವಾರು ಯೋಜನೆಗಳು ಹಾಗೂ ರಾಜ್ಯಕ್ಕೆ ಬರಬೇಕಿರುವ ಅನುದಾನ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ದೆಹಲಿ ಭೇಟಿ ಕುರಿತು ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ಅಂತಾರಾಜ್ಯ ಜಲವಿವಾದಗಳ ಬಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು. ಸಭೆಯಲ್ಲಿ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದ ನೆಲ, ಜಲ, ಭಾಷೆಯ ಹಿತರಕ್ಷಣೆಗೆ ಸರ್ವ ಪ್ರಯತ್ನ ಮಾಡಲಾಗುವುದು. ಈ ವಿಚಾರದಲ್ಲಿ ಯಾವುದೇ ರೀತಿಯ ಆತಂಕ ಬೇಡ.
ಕೇಂದ್ರ ಕೃಷಿ, ಹಣಕಾಸು, ನೀರಾವರಿ, ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಲಾಗುವುದು. ಈಗಾಗಲೇ ಈ ಸಂಬಂಧ ಕೇಂದ್ರದ ಸಚಿವರ ಸಮಯ ಕೇಳಲಾಗಿದೆ ಎಂದು ತಿಳಿಸಿದ್ದರು.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಹ ಭೇಟಿಯಾಗಲಿದ್ದು, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸುತ್ತೇನೆ. ಸಂಪುಟ ರಚನೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಲಾಗುವುದು. ನಡ್ಡಾ ಅವರ ಸಲಹೆ ಪಡೆದುಕೊಳ್ಳಲಾಗುವುದು ಎಂದಿದ್ದರು.
ಇದೇ ವೇಳೆ ಕೋವಿಡ್ ವಿರುದ್ಧದ ಹೋರಾಟ ಕುರಿತು ಮಾತನಾಡಿ, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಮೂರನೇ ಅಲೆ ಬರಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆ.30ರಂದು ತಜ್ಞರು ಮತ್ತು ಕೋವಿಡ್ ಕಾರ್ಯಪಡೆ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಪ್ರಸ್ತುತ ಇರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಂದುವರಿಯಲು ಸೂಚಿಸಲಾಗಿದೆ.
ಸಚಿವರ ನೇತೃತ್ವದ ಕೋವಿಡ್ ಕಾರ್ಯಪಡೆಗೆ ಹೊಸಬರನ್ನು ಸೇರಿಸಿಕೊಳ್ಳಬೇಕೇ ಅಥವಾ ಹಳಬರನ್ನೇ ಮುಂದುವರಿಸಬೇಕೇ ಎಂಬುದರ ಕುರಿತು ಚರ್ಚೆ ಮಾಡಲಾಗುವುದು. 3ನೇ ಅಲೆ ಯನ್ನು ನಿಯಂತ್ರಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.