ನ್ಯೂಡೆಲ್ಲಿ: ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ದೆಹಲಿಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.
ವಿಶೇಷ ರಜೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದ ಅವರು, ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಚರ್ಚಿಸಲಾಗಿದೆ.
ಮೇಕೆದಾಟು ಯೋಜನೆಯ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಹಾಗೂ ತಮಿಳುನಾಡಿನ ಮಧುರೈ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಪ್ರಕರಣ ಮಧುರೈ ವ್ಯಾಪ್ತಿಗೆ ಒಳಪಡದಿರುವುದರಿಂದ ಪ್ರಕರಣವನ್ನು ಕೈಬಿಡಲು ಕ್ರಮ ವಹಿಸಲಾಗುವುದು ಎಂದರು.
ಸಚಿವರಾದ ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಸಂಸದ ಶಿವಕುಮಾರ್ ಉದಾಶಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಮಿತಾ ಪ್ರಸಾದ್, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತಿತರರು ಭಾಗವಹಿಸಿದ್ದರು.