ತಿ.ನರಸೀಪುರ: ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆ ಅಡಿಯಲ್ಲಿ ಮಾದಿಗ ಹಳ್ಳಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎಂ. ಅಶ್ವಿನ್ ಕುಮಾರ್ ತಿಳಿಸಿದ್ದಾರೆ.
ತಾಲೂಕಿನ ಬನ್ನೂರು ಹೋಬಳಿಯ ಮಾದಿಗಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆ ಅನುದಾನದಲ್ಲಿ ಕೆಆರ್ ಐಡಿಎಲ್ 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ, ಸಮುದಾಯ ಭವನ, ದೇವಸ್ಥಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಮಾದಿಗಹಳ್ಳಿ ಗ್ರಾಮದ ಅಭಿವೃದ್ಧಿ ಮಾಡುವುದು ಶಾಸಕನಾಗಿ ನನ್ನ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಮಾದಿಗಹಳ್ಳಿ ಗ್ರಾಮವನ್ನು ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಗೆ ಸೇರಿಸಲಾಗಿತ್ತು. ಹೀಗಾಗಿ ಅನುದಾನ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಇಂದು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದೇನೆ ಎಂದರು.
ಇನ್ನು ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗೆ ಸಹಕಾರ ನೀಡಿ ನಿಗದಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕೋವಿಡ್ ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ಅನುದಾನ ಸರಿಯಾಗಿ ಬಿಡುಗಡೆಯಾಗುತ್ತಿಲ್ಲದ ಕಾರಣ ಅಭಿವೃದ್ಧಿ ಕಾಮಗಾರಿಗಳು ಸದ್ಯ ಮಂದಗತಿಯಲ್ಲಿ ಸಾಗುತ್ತಿವೆ. ಇನ್ನು ಕೊರೊನಾ ಇಳಿಮುಖವಾಗುತ್ತಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಬರಬೇಕಿರುವ ಅನುದಾನ ಬಿಡುಗಡೆಯಾಗುತ್ತದೆ ಎನ್ನುವ ಭರವಸೆ ಇದೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಬಂದರೆ ನಮ್ಮ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳು ಶೀಘ್ರಗತಿಯಲ್ಲಿ ಮುಗಿಯುವಂತೆ ನೋಡಿಕೊಳ್ಳುವ ಜತೆಗೆ ಅದಕ್ಕೆ ಬೇಕಾದ ಅನುದಾನವನ್ನು ತರಲಾಗುವುದು ಎಂದು ಹೇಳಿದರು.