ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಕಲಬುರಗಿ ವಿಭಾಗ ಕಲಬುರಗಿ ಇವರ ವತಿಯಿಂದ “ಯುವಕರ ನಡೆ-ಕೃಷಿಯ ಕಡೆ ಕಾರ್ಯಾಗಾರ” ವನ್ನು ಸೆಪ್ಟೆಂಬರ್ 4 ರಂದು ಬೆಳಗ್ಗೆ 11.10ಕ್ಕೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್.ನಿರಾಣಿ ಇತರರು ಉಪಸ್ಥಿತರಿರಲಿದ್ದಾರೆ.
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ನಂತರದ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥ ಡಾ. ರಾಜು ತೆಗ್ಗಳ್ಳಿ ಹಾಗೂ ಕಲಬುರಗಿ ಜಿಲ್ಲೆಯ ಹಾಳಸುಲ್ತಾನಪುರ ಅನುಭವಿ ರೈತ ಶರಣಬಸಪ್ಪ ಪಾಟೀಲ ಇವರನ್ನು ಈ ಸಂದರ್ಭದಲ್ಲಿ ವಿಶೇಷ ಸನ್ಮಾನ ಮಾಡಲಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗವನ್ನು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ತಿಳಿಸಲಾಗಿದೆ.