ನ್ಯೂಡೆಲ್ಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆಯು ನಾವು ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾವು ರಾಜಕೀಯ ಬಣ್ಣವನ್ನು ಸೇರಿಸಲು ಬಯಸುವುದಿಲ್ಲ. ನಿವೃತ್ತ (ಹೈಕೋರ್ಟ್) ನ್ಯಾಯಾಧೀಶರು (ಪ್ರಕರಣ) ಮೇಲ್ವಿಚಾರಣೆ ಮಾಡಲಿ. ನಾವು ನಿರೀಕ್ಷಿಸಿದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ತನಿಖೆಯಲ್ಲಿ ಕಳಪೆ ಪ್ರಗತಿಯ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಹಾಗೂ ಪತ್ರಕರ್ತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ವಾಹನಕ್ಕೆ ಸೇರಿದ್ದು ಎನ್ನಲಾದ ಎಸ್‌ಯುವಿ ವಾಹನವನ್ನು ಉದ್ದೇಶಪೂರ್ವಕವಾಗಿ ರೈತರ ಮೇಲೆ ಹರಿಸಿ ನಾಲ್ವರನ್ನು ಹತ್ಯೆಗೈಯ್ಯಲಾಗಿತ್ತು.
ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.
ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಗಿದೆ. ಸಿಜೆಐ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದೆ.