ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಮಠಸ ಶಾಲೆಯ ಉಚಿತ ವಸತಿ ನಿಲಯದಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚಿತ್ರದುರ್ಗದ ಬ್ರುಹನ್ಮಠದ ಡಾ.ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಮಠದ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ವಿದ್ಯಾರ್ಥಿನಿಯರನ್ನು ಅಲ್ಲಿನ ವಾರ್ಡನ್ ಸ್ವಾಮೀಜಿ ಬಳಿ ಹಣ್ಣು ತೆಗೆದುಕೊಂಡು ಹೋಗುವಂತೆ ಒತ್ತಾಯ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಮತ್ತು ಬರುವಂತೆ ಮಾಡಿ ಸ್ವಾಮೀಜಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ದೂರಿನಲ್ಲಿ ವಿವರಿಸಿದ್ದಾರೆ.
ಸ್ವಾಮೀಜಿಯ ಕಿರುಕುಳ ತಾಳಲಾರದೆ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರಿಗೆ ಹೋಗಿ ಅಲ್ಲಿಂದ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಕ್ಷಣ ಒಡನಾಡಿಯ ಸ್ಟ್ಯಾನ್ಲಿ ಅವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದಾರೆ. ನಂತರ ಮಕ್ಕಳ ಸಮಿತಿ ಅಧಿಕಾರಿಗಳು ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಪೊಲೀಸರು ದಾಖಲಿಸಿರುವಂತ ಎಫ್ಐಆರ್ ನಲ್ಲಿ ಮುರುಘಾ ಶರಣರನ್ನು ಎ.1 ಆರೋಪಿಯನ್ನಾಗಿ ಮಾಡಲಾಗಿದೆ. ಆ ಬಳಿಕ ಎ2 ಆರೋಪಿಯಾಗಿ ಹಾಸ್ಟೆಲ್ ವಾರ್ಡನ್, ಎ3 ಬಸವಾದಿತ್ಯ, ಎ4 ಪರಮಶಿವಯ್ಯ ಹಾಗೂ ಎ5 ವಕೀಲ ಗಂಗಾಧರಯ್ಯ ಆಗಿದ್ದಾರೆ.
ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದರೆ, ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವುದು ತುಂಬಾ ತ್ರಸದಾಯಕವಾಗಿದೆ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.