ಬೆಂಗಳೂರು: ಬಳ್ಳಾರಿಯ ವಿಮ್ಸ್ನ ಐಸಿಯುನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದಿಂದ ಮೂವರು ರೋಗಿಗಳು ಮೃತಪಟ್ಟಿದ್ದು, ವಿಧಾನಸಭೆ ಅಧಿವೇಶನದಲ್ಲೂ ಈ ವಿಚಾರ ಸದ್ದು ಮಾಡಿತು. ವಿಪಕ್ಷ ನಾಯಕ ಸಿದ್ಧರಾಮಯ್ಯ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು.
ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.
ಇಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಐಸಿಯು ನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದರಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳು ಆಕ್ಸಿಜನ್ ಕೊರತೆಯಿಂದ ಅಸುನೀಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಪರಿಹಾರವನ್ನು ಘೋಷಿಸಿದೆ.
ಮತ್ತೊಂದೆಡೆ ವಿಮ್ಸ್ ಆಸ್ಪತ್ರೆಯ ಐಸಿಯು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಚಿವ ಸುಧಾಕರ್ ಟ್ವಿಟ್ ಮಾಡಿದ್ದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರ, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.