ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಪರಿಷ್ಕರಣೆ ಮಾಡಬೇಕು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ಮಜ್ದೂರ್ ಸಂಘ ದೊಂದಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಮುಖ್ಯಮಂತ್ರಿಗಳ ಮನೆ ಮುಂದೆ ಜಮಾಯಿಸಿದ ನೂರಾರು ನೌಕರರು ವೇತನ ಪರಿಷ್ಕರಣೆಗೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಕಳೆದ 33 ತಿಂಗಳಿನಿಂದ ಬಾಕಿ ಇದ್ದು ರಾಜ್ಯ ಸರ್ಕಾರ ಈ ಬಗ್ಗೆ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆಗೆ ಕರೆಯದೆ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾದರಿದರು.
ಭಾರತೀಯ ಮಜ್ದೂರ್ ಸಂಘ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸಿತು. ಅಲ್ಲದೆ ಪ್ರತಿಭಟನೆಯಲ್ಲಿ ಎಲ್ಲರೂ ಒಕ್ಕೊರಲಿನಿಂದ ರಾಜ್ಯ ಸರ್ಕಾರ ತಕ್ಷಣ ನಮ್ಮ ಸಂಘಟನೆಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿ ಸಾರಿಗೆ ನೌಕರರಿಗೆ ಸರಿಸಮಾನವಾದ ವೇತನ ಪರಿಷ್ಕರಣೆ ಮಾಡಿಕೊಡಬೇಕು.
ಇನ್ನು ಕಳೆದ 2021ರ ಏಪ್ರಿಲ್ನಲ್ಲಿ ನಡೆದ ಮುಷ್ಕರದ ವೇಳೆ ವಜಾಗೊಂಡ ನೌಕರರನ್ನು ಬೇಷರತ್ತಾಗಿ ಮರು ನೇಮಕ ಮಾಡಿ ಕೊಳ್ಳಬೇಕು. ನಾಲ್ಕೂ ನಿಗಮಗಳಲ್ಲೂ ಏಕರೂಪ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇನ್ನು ನಿವೃತ್ತ ನೌಕರರಿಗೆ ಬಾಕಿ ಹಣವನ್ನು ತಕ್ಷಣ ಸಂದಾಯ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ಅಧ್ಯಕ್ಷ ಎಚ್.ಎಲ್.ವಿಶ್ವನಾಥ್ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ನೂರಾರು ನೌಕರರು ಸಂಘಟದ ಪದಾಧಿಕಾರಿಗಳು ಭಾಗವಹಿಸಿದ್ದರು.