ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಇದರಿಂದಾಗಿ ಕಳೆದ ಡಿಸೆಂಬನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಅಯ್ಕೆಯಾಗಿದ್ದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಆದರೆ, ಎಂ.ಕೆ. ಪ್ರಾಣೇಶ್ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಅವರು ನಿರಾಳರಾಗಿದ್ದಾರೆ.
ಚುನಾವಣೆಯಲ್ಲಿ ಆರು ಮತಗಳ ಅಂತರದಲ್ಲಿ ಸೋಲುಂಡಿದ್ದ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ನೇತೃತ್ವದ ಏಕಸದಸ್ಯ ಪೀಠವು ಆದೇಶ ನೀಡಿದೆ. ಬೆಂಗಳೂರು ಪೀಠದಲ್ಲಿ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಪೀಠವು ಧಾರವಾಡ ಪೀಠದಲ್ಲಿ ಗುರುವಾರ ಈ ಮಹತ್ವದ ತೀರ್ಪನ್ನು ಬಹಿರಂಗಪಡಿಸಿದೆ.
ಕೋರ್ಟ್ ಹೇಳಿದ್ದೇನು? ಸಂವಿಧಾನದ ಕಲಂ 243 (6) ಮತ್ತು ಕರ್ನಾಟಕ ಮುನ್ಸಿಪಲ್ ಕಾರ್ಪೋರೇಶನ್ (ಕೆಎಂಸಿ) ಕಾಯಿದೆ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಮುನಿಸಿಪಾಲಿಟಿ ಸಭೆಗಳಲ್ಲೂ ಸಹ ಮತದಾನ ಮಾಡುವ ಹಕ್ಕಿಲ್ಲ. ಅವರು ಸಲಹೆ ಸೂಚನೆಗಳನ್ನು ನೀಡಬಹುದಷ್ಟೇ. ಹೀಗಾಗಿ ವಿಧಾನ ಪರಿಷತ್ ಚುನಾವಣೆಯಲ್ಲೂ ಸಹ ಮತದಾನದ ಹಕ್ಕು ಇರುವುದಿಲ್ಲ ಎನ್ನುವುದು ಕೋರ್ಟ್ ಮಹತ್ವದ ಆದೇಶ ನೀಡಿದೆ.
ಅರ್ಜಿದಾರರ ಪರ ವಾದವೇನಿತ್ತು?: ಚಿಕ್ಕಮಗಳೂರು ಕ್ಷೇತ್ರದಿಂದ ನಡೆದ ಚುನಾವಣೆಯ ಮತದಾರರ ಪಟ್ಟಿಗೆ 4 ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರನ್ನೂ ಸೇರಿಸಿರುವುದು ಕಾನೂನುಬಾಹಿರ ಕ್ರಮ. ಸಂವಿಧಾನದ ನಿಯಮಗಳ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಭಾಗವಹಿಸಬಹುದೇ ಹೊರತು, ಅವರಿಗೆ ಮತದಾನದ ಹಕ್ಕಿರುವುದಿಲ್ಲ. ಹೀಗಾಗಿ, ಕಾನೂನು ಬಾಹಿರವಾಗಿ ಅವರಿಗೆ ಮತದಾನದ ಹಕ್ಕು ನೀಡಿರುವುದರಿಂದ ಆ ಮತಗಳ ಆಧಾರದ ಮೇಲೆ ಎಂ.ಕೆ. ಪ್ರಾಣೇಶ್ ಗೆಲುವು ಸಾಧಿಸಿದ್ದಾರೆ ಎನ್ನುವುದು ಅರ್ಜಿದಾರರ ಪರ ವಾದವಾಗಿತ್ತು.
ಚುನಾವಣಾ ಆಯೋಗದ ವಕೀಲರ ಪ್ರತಿವಾದವೇನು? ಚುನಾವಣಾ ಆಯೋಗದ ಪರವಾಗಿ ಕೋರ್ಟ್‌ನಲ್ಲಿ ಪ್ರತಿವಾದ ಮಂಡಿಸಿದ ವಕೀಲ ಶರತ್ ದೊಡ್ಡವಾಡ, ನಾಮನಿರ್ದೇಶಿತ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದಾಕ್ಷಣಾ ವಿಧಾನ ಪರಿಷತ್ ಚುನಾವಣೆಯ ಮತದಾನದ ಹಕ್ಕಿಲ್ಲ ಎಂದು ಹೇಳಲಾಗದು. ಸ್ಥಳೀಯ ಸಂಸ್ಥೆಗಳ ಸಭೆ ಬೇರೆ ಮತ್ತು ವಿಧಾನ ಪರಿಷತ್ ಚುನಾವಣೆಯೇ ಬೇರೆ, ನಾಮ ನಿರ್ದೇಶಿತರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲ ಎಂದು ಎಲ್ಲೂ ನಿರ್ಬಂಧ ಹೇರಿಲ್ಲ ಎಂದು ವಾದಿಸಿದ್ದರು. ಪ್ರತಿವಾದಿ ಎಂ.ಕೆ. ಪ್ರಾಣೇಶ್ ಪರ ವಕೀಲರ ವಾದವೂ ಇದೇ ಆಗಿತ್ತು.
ಏನಿದು ಪ್ರಾಣೇಶ್ ಪ್ರಕರಣ: 2021ರ ನವೆಂಬರ್ 9ರಂದು ಚಿಕ್ಕಮಗಳೂರು ಸೇರಿದಂತೆ ರಾಜ್ಯದ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ 25 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಎಂ.ಕೆ. ಪ್ರಾಣೇಶ್ 1182 ಮತಗಳನ್ನು ಮತ್ತು ಗಾಯತ್ರಿ ಅವರು 1176 ಮತಗಳನ್ನು ಪಡೆದಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಗಾಯತ್ರಿ ಶಾಂತೇಗೌಡ, ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಮತ್ತು ಕೊಪ್ಪ ಪುರಸಭೆಗಳ 12 ನಾಮನಿರ್ದೇಶಿತ ಸದಸ್ಯರಿಗೆ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಿರುವುದರಿಂದ ಪ್ರಾಣೇಶ್ ಗೆಲುವು ಸಾಧಿಸಿದ್ದಾರೆ.
ಆದರೆ, ಮೂಲತಃ ಸಂವಿಧಾನದ ನಿಯಮಗಳಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲ. ಪ್ರತಿವಾದಿಯ ಆಯ್ಕೆ ಅಕ್ರಮ ಹಾಗೂ ಕಾನೂನು ಬಾಹಿರ. ಹೀಗಾಗಿ, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದರು.
ಚುನಾವಣಾ ತಕರಾರು ಅರ್ಜಿ ಬಾಕಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಆಯ್ಕೆ ಸಿಂಧುತ್ವ ಪತ್ನಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಹೈಕೋರ್ಟ್‌ನ ಮತ್ತೊಂದು ಪೀಠದಲ್ಲಿ ಬಾಕಿ ಇದೆ. ಹೀಗಾಗಿ, ಅರ್ಜಿ ಇತ್ಯರ್ಥವಾಗುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ಈಗ ನೀಡಿರುವ ತೀರ್ಪು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದೆ.